More

    ಅತಿವೃಷ್ಟಿಯಿಂದ 972 ಕೋಟಿ ರೂ. ಹಾನಿ

    ಬೆಳಗಾವಿ: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲ ಸೌಕರ್ಯ ಸೇರಿ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂ. ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

    ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಆದರೂ ಕೆಲ ಕಡೆ ಹೆಚ್ಚಿನ ಮಳೆಯಿಂದಾಗಿ ಉಂಟಾಗಿರುವ ಬೆಳೆಹಾನಿ ಕುರಿತಂತೆ ಜಂಟಿ ಸಮೀಕ್ಷೆ ನಡೆಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನೀರು ಬಿಡುಗಡೆ ಮಾಹಿತಿ ಇರಲಿ: ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಬಗ್ಗೆ ನಿರಂತರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ದಿಢೀರ್ ನೀರು ಬಿಡುಗಡೆ ಮಾಡಿದರೆ ನದಿ ತೀರದ ಗ್ರಾಮಗಳಿಗೆ ಹಾಗೂ ನಿವಾಸಿಗಳಿಗೆ ತೊಂದರೆಯಾಗುತ್ತದೆ. ಈ ಬಾರಿ ಸಮನ್ವಯ ಸಮರ್ಪಕವಾಗಿರುವುದರಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು ಸಾಧ್ಯವಾಗಿದೆ ಎಂದರು.

    ತಡೆಗೋಡೆ ಚರ್ಚೆ: ಇದೇ ವೇಳೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಹಾಗೂ ಕೊಯ್ನ ಜಲಾಶಯದ ಮಾಹಿತಿಯನ್ನು ಸಚಿವ ಜಾರಕಿಹೊಳಿ ಅವರು ಅಧಿಕಾರಿಗಳಿಂದ ಪಡೆದುಕೊಂಡರು. ಮಲಪ್ರಭಾ ನದಿಯಿಂದ ಗೋಕಾಕ ಮತ್ತು ರಾಮದುರ್ಗದ ಕೆಲವೆಡೆ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ತಡೆಗೋಡೆ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಕೆರೆ ತುಂಬಿಸುವ ಯೋಜನೆಯ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

    ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಇಂಜಿನಿಯರ್ ಅರವಿಂದ ಕಣಗಲಿ, ಹಿಡಕಲ್ ಜಲಾಶಯದ ಕಾರ್ಯ ನಿರ್ವಾಹಕ ಅಭಿಯಂತ ಆರ್.ಬಿ. ದಾಮಣ್ಣವರ, ನೀರಾವರಿ ಇಲಾಖೆ ಅಭಿಯಂತ ಸಿ.ಡಿ. ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ ಹಾಗೂ ಇತರ ಅಧಿಕಾರಿಗಳಿದ್ದರು.

    ಬೆಳೆಹಾನಿ ವಿವರ ನೀಡಿದ ಜಿಲ್ಲಾಧಿಕಾರಿ: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಲ್ಲ. ಆದರೆ, ಸದ್ಯಕ್ಕಿರುವ ದಾಸ್ತಾನು ಲಭ್ಯತೆ ಸಮರ್ಪಕವಾಗಿ ಹಾಗೂ ಸಕಾಲಕ್ಕೆ ರೈತರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ನೀಡಲಾಗಿರುವ ನಿರ್ದೇಶನದ ಪ್ರಕಾರ ತಕ್ಷಣವೇ ಬೆಳೆಹಾನಿ ಜಂಟಿ ಸಮೀಕ್ಷೆ ಕೈಗೊಳ್ಳಬೇಕು ಎಂದು ತಿಳಿಸಿದರು. ಅಲ್ಲದೆ, ಮುಖ್ಯಮಂತ್ರಿ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು ಸಚಿವ ರಮೇಶ ಜಾರಕಿಹೊಳಿ ಅವರು ಅಧಿಕಾರಿಗಳ ಜತೆ ಚರ್ಚಿಸಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೆಳೆಹಾನಿ, ಜೀವಹಾನಿ ಹಾಗೂ ಪರಿಹಾರ ವಿತರಣೆಯ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts