

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್ ಬಳಿಕ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗಳಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಕೆಲ ವಾರಗಳ ಕಾಲ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದ ಸೂರ್ಯಕುಮಾರ್ ಯಾದವ್ ಜನವರಿ 11ರಂದು ಆರಂಭಗೊಳ್ಳಲಿರುವ ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಚೇತರಿಸಿಕೊಳ್ಳಲು ಕನಿಷ್ಠ 7 ವಾರಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಗೈರಾಗುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾರ್ದಿಕ್ ಹಾಗೂ ಸೂರ್ಯ ಇಬ್ಬರು ಗೈರಾದರೆ ರೋಹಿತ್ ಶರ್ಮಾ ಅಥವಾ ರವೀಂದ್ರ ಜಡೇಜಾ ತಂಡವನ್ನು ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ.
ಸೂರ್ಯಕುಮಾರ್ ಸುಮಾರು 7 ವಾರಗಳ ಕಾಲ ಕ್ರಿಕೆಟ್ ಆಕ್ಷನ್‌ನಿಂದ ದೂರವಿರುತ್ತಾರೆ. ಹೀಗಾಗಿ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.