

ಪಡುಬಿದ್ರಿ: ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿಯಾಗಿದೆ ಎಂದು ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಹೇಳಿದರು.
ಉಡುಪಿ ಜಿಲ್ಲೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಪತ್ನಿ ದೀವಿಷಾರೊಂದಿಗೆ ಮಂಗಳವಾರ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದು ಅನುಗ್ರಹ ಪ್ರಸಾದ ಸ್ವೀಕರಿಸಿ ನೂತನವಾಗಿ ಇಳಕಲ್ ಶಿಲೆಯಿಂದ ನಿರ್ಮಾಣವಾಗುತ್ತಿರುವ ಮಾರಿಗುಡಿ ದೇವಸ್ಥಾನದ ಕಾಮಗಾರಿ ವೀಕ್ಷಿಸಿ ಮುಖಮಂಟಪದ ಶಿಲಾಸ್ತಂಭ ಸಹಿತ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಕಾಪುದ ಅಮ್ಮ ಎಂದು ತುಳುವಿನಲ್ಲಿ ಸಂಬೋಧಿಸಿದ ಸೂರ್ಯಕುಮಾರ್ ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಇಲ್ಲಿಗೆ ಬಂದಿದ್ದೇನೆ. ನಾನೊಬ್ಬ ಸೆಲೆಬ್ರಿಟಿ ಎಂಬ ಆಲೋಚನೆ ನನಗೆ ಬಂದಿಲ್ಲ. ಆಟದಲ್ಲಿ ಉತ್ತಮ ಪ್ರದರ್ಶನದ ಬಗ್ಗೆ ಗಮನ ಹರಿಸಿದ್ದೇನೆ. ದೇಶಕ್ಕೆ ಕಪ್ ತಂದುಕೊಡುವ ಸಂದರ್ಭವನ್ನು ದೇವರು ಸೃಷ್ಟಿ ಮಾಡಿದ್ದಾನೆ. ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು. ದೇವಸ್ಥಾನದ ಬ್ರಹ್ಮಕಲಶೋತ್ಸವದ ದಿನಗಳಲ್ಲಿ ಮತ್ತೆ ಬರಬೇಕು ಎಂಬ ಇಚ್ಛೆ ಇದೆ ಎಂದರು.