

ಮುಂಬೈ: ತೀವ್ರ ಸಂಚಲನ ಮೂಡಿಸಿರುವ ಮಹಾರಾಷ್ಟ್ರ ಸರ್ಕಾರ ರಚನೆ ಕಸರತ್ತಿಗೆ ತೆರೆ ಬಿದ್ದಿದ್ದು, ಡಿಸೆಂಬರ್ 05ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದೆ. ಮುಂಬೈನ ಅಜಾದ್ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಿಎಂ (CM) ಯಾರಾಗುತ್ತಾರೆ ಎಂಬ ಕುತೂಹಲದ ನಡುವೆಯೇ ಕಾರ್ಯಕ್ರಮಕ್ಕೆ ಅಧಿಕಾರಿಗಳು ಈಗಾಗಲೇ ತಯಾರಿ ಆರಂಭಿಸಿದ್ದಾರೆ.
ಮಹಾಯುತಿ ನಾಯಕರು ಈಗಾಗಲೇ ಕೇಂದ್ರ ಗೃಹಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಅಧಿಕಾರ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದು, ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಸಿಗುವುದು ಫಿಕ್ಸ್ ಆಗಿದೆ. ಶಿವಸೇನೆ ಹಾಗೂ ಎನ್ಪಿಗೆ ಉಪಮುಖ್ಯಮಂತ್ರಿ ಸ್ಥಾನ ಖಾತ್ರಿಯಾಗಿದ್ದು, ಡಿಸೆಂಬರ್ 05ರಂದು ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಈ ಬಗ್ಗೆ ಮಾತನಾಡಿರುವ ಹಿರಿಯ ಬಿಜೆಪಿ ನಾಯಕರೊಬ್ಬರು, ಡಿಸೆಂಬರ್ 05ರಂದು ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಮುಂದಿನ ಮುಖ್ಯಮಂತ್ರಿಯನ್ನು ಹೆಸರಿಸುವ ಬಿಜೆಪಿ ನಾಯಕತ್ವದ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಶಿಂದೆ ಸ್ಪಷ್ಟಪಡಿಸಿದ್ದಾರೆ. ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಮುಖ್ಯಮಂತ್ರಿ ಸ್ಥಾನಕ್ಕೆ ಫಡ್ನವೀಸ್ ಅವರನ್ನು ಆಯ್ಕೆ ಮಾಡಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಈಚೆಗೆ ಪ್ರಕಟಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 235 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು 49 ಸ್ಥಾನಗಳಲ್ಲಿ ಜಯಗಳಿಸಿದೆ.