ಪಿರಿಯಾಪಟ್ಟಣ: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿಗೆ ತಂದ ಹಿನ್ನೆಲೆಯಲ್ಲಿ ಬುಧವಾರ ಪಿರಿಯಾಪಟ್ಟಣ ಸಾರಿಗೆ ಘಟಕದ ಸಿಬ್ಬಂದಿ ಸರ್ಕಾರ ಮತ್ತು ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು.
ಪಟ್ಟಣದ ಸಾರಿಗೆ ಘಟಕದ ಆವರಣದಲ್ಲಿ ಚಾಲಕರು, ನಿರ್ವಾಹಕರು ಹಾಗೂ ಸಿಬ್ಬಂದಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರ ಭಾವಚಿತ್ರವುಳ್ಳ ಫ್ಲೆಕ್ಸ್ ಹಾಕಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಹಲವು ವರ್ಷಗಳ ಸಾರಿಗೆ ಸಿಬ್ಬಂದಿ ಕನಸು ನನಸಾಗಿದೆ. ಆಕಸ್ಮಿಕ ಕಾಯಿಲೆ ಹಾಗೂ ತುರ್ತು ಅನಾರೋಗ್ಯ ಸಂದರ್ಭ ನಗದು ರಹಿತವಾಗಿ ಹಲವು ದರ್ಜೆಯ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ದೊರೆಯಲು ಕಾರಣವಾದ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಮೇಲಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಘಟಕ ವ್ಯವಸ್ಥಾಪಕ ದರ್ಶನ್ ರಾಮಚಂದ್ ಇತರರಿದ್ದರು.