ಪಠ್ಯೇತರ ಚಟುವಟಿಕೆಯಿಂದ ಪ್ರಗತಿ - ಫಾ. ಲಾರೆನ್ಸ್ ಮಸ್ಕರೇನಸ್ ಹೇಳಿಕೆ - ಜಿಲ್ಲಾಮಟ್ಟದ ಈಜು ಸ್ಪರ್ಧೆ

PTR_3 AUG_8
Published on


ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ’ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆ ೨೦೨೪-೨೫’ ಸ್ಪರ್ಧೆ ಶುಕ್ರವಾರ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ತಿಳಿಸಿದರು.


ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಪುತ್ತೂರಿನ ದಂತ ವೈದ್ಯ ಡಾ. ಪ್ರಕಾಶ್ ಬಿ. ಮಾತನಾಡಿ, ಬಾಲವನದ ಈಜುಕೊಳದಲ್ಲಿ ಆರಂಭವಾದ ನಿಮ್ಮ ಸಾಧನೆಯ ಹಾದಿ ಅಂತರಾಷ್ಟ್ರೀಯ ಮಟ್ಟದ ತನಕ ತಲುಪಲಿ ಎಂದು ಹಾರೈಸಿದರು.


ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರತಿಮಾ ಹೆಗ್ಡೆ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ, ಜಿಲ್ಲೆಯ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಕರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿದರು. ಉಪನ್ಯಾಸಕಿ ಡಾ.ಆಶಾ ಸಾವಿತ್ರಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.


*ಅಲೋಷಿಯಸ್‌ಗೆ ಸಮಗ್ರ ಪ್ರಶಸ್ತಿ : ದಕ್ಷಿಣ ಕನ್ನಡ ಜಿಲ್ಲೆಯ ೧೪ ಪದವಿ ಪೂರ್ವ ಕಾಲೇಜುಗಳ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರಿನ ಸಂತ ಅಲೋಷಿಯಸ್ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರೆ, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net