More

    ಜಿಲ್ಲೆಯಲ್ಲಿ ಶೀತಲೀಕರಣ ಘಟಕ ಸ್ಥಾಪನೆಗೆ ಕ್ರಮವಹಿಸಿ

    ಬಾಗಲಕೋಟೆ: ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಪ್ರಮಾಣ ಹೆಚ್ಚಿಗೆ ಇದ್ದು, ರಫ್ತು ಪ್ರಮಾಣ ಹೆಚ್ಚಿಸಲು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಶೀತಲೀಕರಣ ಘಟಕ ಸ್ಥಾಪನೆಗೆ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೆಳೆಯುತ್ತಿರುವ ದ್ರಾಕ್ಷಿ ಮತ್ತು ಅರಿಶಿಣ ಬೆಳೆ ಸಂಗ್ರಹಣೆಗೆ ಶೀತಲೀಕರಣ ಘಟಕ ಅವಶ್ಯವಿದ್ದು, ತೋಟಗಾರಿಕೆ ಇಲಾಖೆ ಸಹಾಯಧನ ನೀಡುವ ಮೂಲಕ ಘಟಕ ಸ್ಥಾಪನೆಗೆ ಕ್ರಮವಹಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಉತ್ಪನ್ನ ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು.

    ಜಿಲ್ಲೆಯಲ್ಲಿ ಬರ ನಿರ್ವಹಣೆಯಲ್ಲಿ ಬೇಜವಾಬ್ದಾರಿ ಸಲ್ಲದು. ಸಮಸ್ಯೆ ಹತೋಟಿ ಮೀರುವ ಮುನ್ನವೇ ಬಗೆಹರಿಸುವ ಕೆಲಸವಾಗಬೇಕು. ಗ್ರಾಮ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜವಾಬ್ದಾರಿ ಹೆಚ್ಚಿಗೆ ಇದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಹೆಸ್ಕಾಂದವರು ವಿದ್ಯುತ್ ಕಡಿತಗೊಳಿಸದಂತೆ ಸೂಚಿಸಿದರು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಚಾಲ್ತಿಯಲ್ಲಿರಬೇಕು ಎಂದು ತಿಳಿಸಿದರು.

    ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಪ್ರಥಮ ಆದ್ಯತೆ ನೀಡಿ, ನಂತರ ಖಾಸಗಿ ಕೊಳವೆ ಬಾವಿ ಬಾಡಿಗೆ ಪಡೆದು ನೀರು ಒದಗಿಸಲು ಕ್ರಮವಹಿಸಬೇಕು. ಅನಿವಾರ್ಯ ಪರಿಸ್ಥಿತಿ ಇದ್ದಾಗ ಮಾತ್ರ ಹೊಸ ಕೊಳವೆ ಬಾವಿ ಕೊರೆಯಿಸಬೇಕು. ಗೋಶಾಲೆಗಳಿಗೆ ಮೇವು ಕೊಡಲು ಸೂಚಿಸಿದರು. ಹೊಸದಾಗಿ ಗೋಶಾಲೆ ನಿರ್ಮಿಸಲು ಮುಂದೆ ಬಂದಲ್ಲಿ ಅನುಕೂಲ ಮಾಡಿಕೊಡಲು ತಿಳಿಸಿದರು.

    ಬರುವ ಮುಂಗಾರು ಹಂಗಾಮಿಗೆ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆ ಇದೆ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಬಾಕಿ ಇರುವ ಎಲ್ಲ ಬಿಲ್‌ಗಳನ್ನು 2-3 ದಿನಗಳಲ್ಲಿ ಮಾಡಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮವಹಿಸಬೇಕು. ವಿವಿಧ ಇಲಾಖೆಯ ಪ್ರಗತಿ ಮಾಹಿತಿಯನ್ನು ಪಡೆದ ಅವರು ಪ್ರಗತಿ ಕಡಿಮೆ ಇರುವ ಇಲಾಖೆಯ ಅಧಿಕಾರಿಗಳು ಮಾರ್ಚ್ ಅಂತ್ಯಕ್ಕೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ವಿಶೇಷ ಜಿಲ್ಲಾಧಿಕಾರಿ ದುರಗೇಶ ಪಿ., ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಮುಖ್ಯ ಯೋಜನಾಧಿಕಾರಿ ಪುನೀತ್, ಯೋಜನಾಧಿಕಾರಿ ಎನ್.ವೈ.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts