More

    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ

    ವಿಜಯಪುರ: ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಡಿಮೆ ಸಾಧನೆಗೈದ ಶಾಲೆಗಳನ್ನು ಗುರುತಿಸಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾದ್ಯಂತ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಈಗಾಗಲೇ ದತ್ತು ಪಡೆದ ಶಾಲೆಗಳಿಗೆ ಕಡ್ಡಾಯವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ತಿಂಗಳು ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆ ಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಫಲಿತಾಂಶ ಉತ್ತಮಪಡಿಸಲು ಸೂಕ್ತ ಮಾರ್ಗದರ್ಶನ ಮಾಡಬೇಕು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಭೂಮಿಯ ಖಾತಾ ಉತಾರೆ ಪಡೆದು ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಅಭಿಯಾನದ ರೀತಿಯಲ್ಲಿ ಕಾರ್ಯನಿರ್ವಹಿಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕಾಲಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಿ ಶೈಕ್ಷಣಿಕ ಗುಣಮಟ್ಟ, ಬೋಧನಾ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಬೇಕು. ಶಾಲೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸರಿಯಾಗಿ ಬೋಧನೆ ಮಾಡದ ಶಿಕ್ಷಕರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಬರ ನಿರ್ವಹಣೆ

    ಬರ ಪರಿಸ್ಥಿತಿ ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹಿಸಬೇಕು. ಕೃಷಿ-ತೋಟಗಾರಿಕೆಗೆ ಪೂರಕ ಚಟುವಟಿಕೆ ಹಮ್ಮಿಕೊಳ್ಳಬೇಕು. ರೈತ ಜೀವನ ಮಟ್ಟ ಸುಧಾರಿಸಲು ಕ್ರಮ ವಹಿಸಬೇಕು. ಹೈನುಗಾರಿಕೆಗೆ ಒತ್ತು ನೀಡಬೇಕು. ಕೃಷಿ ಉಪ ಕಸುಬುಗಳಾದ ಸಾವಯವ ಗೊಬ್ಬರ ತಯಾರಿಕೆ, ಕುರಿ-ಹಸು ಸಾಕಾಣಿಕೆ ಮತ್ತಿತರ ಕಸಬುಗಳಿಗೆ ರೈತರನ್ನು ಪ್ರೇರೆಪಿಸಿ ವಿವಿಧ ಕೃಷಿ ಪೂರಕ ಚಟುವಟಿಕೆಗಳಿಂದ ಉತ್ಪನ್ನ ದೊರಕುವಂತೆ ವಿವಿಧ ಯೋಜನೆಗಳ ಮೂಲಕ ರೈತರಿಗೆ ಸೌಲಭ್ಯ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

    ಅಂಗನವಾಡಿಗಳಲ್ಲಿ ಸ್ವಚ್ಛತೆ

    ಅಂಗನವಾಡಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಕಾಲಕಾಲಕ್ಕೆ ಕೇಂದ್ರಗಳಿಗೆ ಭೇಟಿ ಮಾಡಿ, ಭೇಟಿ ಮಾಡಿದ ವರದಿ ದಾಖಲಿಸಬೇಕು. ಕೇಂದ್ರದಲ್ಲಿನ ಆಹಾರ ಗುಣಮಟ್ಟ, ಬೋಧನಾ ಕ್ರಮ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಬೇಕು. ಕುಂದು ಕೊರತೆಗಳಿದ್ದಲ್ಲಿ ವ್ಯವಸ್ಥೆ ಸುಧಾರಣೆಗೆ ಕ್ರಮ ವಹಿಸಬೇಕು. ಎಲ್ಲ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳು ಹೊಂದಬೇಕು. ನಿವೇಶನ ಇಲ್ಲದೇ ಇರುವ ಅಂಗನವಾಡಿಗಳಿಗೆ ಸೂಕ್ತ ನಿವೇಶನ ಗುರುತಿಸಿ ಸ್ವಂತ ಕಟ್ಟಡಕ್ಕೆ ಕ್ರಮ ವಹಿಸಬೇಕು. ಚಾಲ್ತಿಯಲ್ಲಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಬೇಗ ಮುಗಿಸಿ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು. ಬಾಕಿ ಉಳಿದ ಅಂಗನವಾಡಿಗಳ ನಿವೇಶನಕ್ಕಾಗಿ ಸಂಬಂಧಪಟ್ಟ ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ನಗರ ಪ್ರದೇಶದಲ್ಲಿ ನಿವೇಶನ ಪಡೆಯಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

    ಕುಡಿಯುವ ನೀರು ಪೂರೈಕೆ

    ಕುಡಿಯುವ ನೀರಿನ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಟೆಂಡರ್ ಕರೆದು ಟ್ಯಾಂಕರ್ ಮೂಲಕ ನೀರು ಪೂರೈಸಲು ಆದ್ಯತೆ ನೀಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಜಾಗೃತಿ ವಹಿಸಿ, ಪರೀಕ್ಷಿಸಿದ ನಂತರ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ತಡೆಗೆ ಕ್ರಮ ವಹಿಸಬೇಕು. ಡಿಸೆಂಬರ್- ಜನವರಿ ತಿಂಗಳಲ್ಲಿ ಮದುವೆ ಸೀಜನ್ ಇರುವುದರಿಂದ ಕಟ್ಟುನಿಟ್ಟಾಗಿ ಗ್ರಾಮೀಣ ಮಟ್ಟದಲ್ಲಿ ನಿಗಾ ವಹಿಸಿ ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸಬೇಕು. ಬಾಲ್ಯ ವಿವಾಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲ್ಯ ವಿವಾಹ ನಡೆಸುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸಮಾಲೋಚನೆ ನಡೆಸಿ, ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬಾಲ್ಯವಿವಾಹಗಳು ನಡೆಯದಂತೆ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು ಎಂದರು.

    ವಸತಿ ನಿಲಯಗಳ ಸ್ಥಿತಿ

    ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿನದಲ್ಲಿ ಬರುವ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಕ್ರಮ ವಹಿಸಬೇಕು. ವಸತಿ ನಿಲಯಗಳಲ್ಲಿ ಕಲ್ಪಿಸಲಾಗುತ್ತಿರುವ ಮೂಲ ಸೌಲಭ್ಯಗಳ ಕುರಿತು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನ್ಯೂನತೆ ಕಂಡು ಬಂದಲ್ಲಿ ಕೂಡಲೆ ಪರಿಹಾರಕ್ಕೆ ಕ್ರಮ ವಹಿಸಬೇಕು. ವಸತಿ ನಿಲಯದ ಆವರಣದಲ್ಲಿ ಗಿಡ ಮರಗಳನ್ನು ಬೆಳೆಸಿ ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

    ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಕುಂದು- ಕೊರತೆ ಅರ್ಜಿಗಳಿನ್ನು ಆದ್ಯತೆ ಮೇಲೆ ಪರಿಹರಿಸಿ ವಿಲೇವಾರಿಗೆ ಕ್ರಮ ವಹಿಸಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವ ನಿಧಿ ಸೇರಿದಂತೆ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ದೊರೆಯುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಯಾವುದೇ ದೂರು ಬಾರದಂತೆ ಸಮರ್ಪಕವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದರು. ಜಿಪಂ ಸಿಇಒ ರಾಹುಲ್ ಶಿಂಧೆ ಪ್ರಗತಿ ವಿವರ ನೀಡಿದರು.

    ಎಎಸ್‌ಪಿ ಶಂಕರ ಮಾರಿಹಾಳ, ಎಡಿಸಿ ಮಹಾದೇವ ಮುರಗಿ, ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts