ಬೈಲಹೊಂಗಲ: ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಿ

ಬೈಲಹೊಂಗಲ: ರಾಜ್ಯ ಸರ್ಕಾರ ಬೀದಿ ಬದಿ ವ್ಯಾಪಾರಸ್ಥರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ಅನೇಕ ಸೌಲಭ್ಯಗಳನ್ನು ತಂದಿದ್ದು, ಫಲಾನುಭವಿಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದ್ದಾರೆ.

ಪಟ್ಟಣದ ಪುರಸಭೆ ಆವರಣದಲ್ಲಿ ಬುಧವಾರ ನಡೆದ ಡೇ-ನಲ್ಮ ಯೋಜನೆಯಡಿ ಸ್ವ ಸಹಾಯ ಗುಂಪಿನ ಶಹರಿ ಸಮೃದ್ಧಿ ಉತ್ಸವ ಉದ್ಘಾಟಿಸಿ ಮಾತನಾಡಿ, ರಾಜ್ಯ ಸಮಿಶ್ರ ಸರ್ಕಾರ ಬೀದಿ ಬದಿ ವ್ಯಾಪಾರಸ್ಥರಿಗೆ ಮಾರಾಟ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅಡುಗೆ ಅನಿಲ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಸಹಾಯ ಗುಂಪಿನ ಸದಸ್ಯರು ಹಾಗೂ ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅಂಬಿಗೇರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡ ಕುಟುಂಬಗಳಿಗೆ ಜಾರಿಗೊಳಿಸಿದ ಜನಧನ್ ಯೋಜನೆ, ಸ್ವಚ್ಛ ಭಾರತ ಮಿಷನ್, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ, ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆ, ಅಟಲ್ ಪೆನಶ್ಶನ್ ಯೋಜನೆ, ರಾಷ್ಟ್ರೀಯ ಪೌಷ್ಟಿಕ ಅಭಿಯಾನ ಯೋಜನೆ, ಆಯುಷ್ಮಾನ್ ಭಾರತ, ಬಡವರ ಬಂಧು ಹಲವು ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಜಯಶ್ರೀ ಮಾತನಾಡಿ, ಅಂಗನವಾಡಿ, ಮಾತೃಶ್ರೀ ಯೋಜನೆ ಮತ್ತು ಸ್ವ ಸಹಾಯ ಗುಂಪು ಚಟುವಟಿಕೆಗಳ ಕಾರ್ಯನಿರ್ವಹಣೆ ಹಾಗೂ ಪೌಷ್ಟಿಕ ಆಹಾರದ ಕುರಿತು ತಿಳಿಸಿದರು. ಸಿಂಡಿಕೇಟ್ ಬ್ಯಾಂಕ್ ಫೀಲ್ಡ್ ಆಫೀಸರ್ ಬ್ಯಾಂಕಿನಿಂದ ದೊರಕುವ ಸಾಲ ಸೌಲಭ್ಯ ಹಾಗೂ ಸರ್ಕಾರದ ವಿಮಾ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಮುತ್ನಾಳ, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ಡಾ.ಸಂಜೀವ ತಿಗಣಿ, ಪುರಸಭೆ ಸಮೂಹ ಸಂಪನ್ಮೂಲ ಅಧಿಕಾರಿ ರಮೇಶ ಹಿಟ್ಟಣಗಿ ಇದ್ದರು. ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ನಗರದಲ್ಲಿ ಸ್ವ ಸಹಾಯ ಗುಂಪಿನ ಸದಸ್ಯರು ಹಾಗೂ ಅಧಿಕಾರಿಗಳು ಜಾಥಾ ಮೆರವಣಿಗೆ ನಡೆಸಿದರು.