More

    ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ : ಮೈಸೂರು ಜಿಲ್ಲಾಧಿಕಾರಿ ನಿರ್ದೇಶನ

    ಮೈಸೂರು: ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಆಯಾ ತಾಲೂಕಿನ ತಹಶೀಲ್ದಾರ್, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ತಹಶೀಲ್ದಾರ್‌ಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಗರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸಭೆ ನಡೆಸಿ ಅಗತ್ಯ ನಿರ್ದೇಶ ನೀಡಿದರು.

    ಗ್ರಾಮ ಹಾಗೂ ನಗರ, ಪಟ್ಟಣ ಪ್ರದೇಶಗಳಲ್ಲಿ ಚರಂಡಿ ನಿರ್ವಹಣೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ನೀರುಗಂಟಿ, ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿ ನೀರಿನ ಶೇಖರಣೆ ಹಾಗೂ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

    ಹವಾಮಾನ ಬದಲಾವಣೆ ಮತ್ತಿತರ ಕಾರಣಗಳಿಂದ ಕರಳು ಬೇನೆ (ಗ್ಯಾಸ್ಟ್ರೋ ಎಂಟರಿಟೈಸ್) ಸೇರಿದಂತೆ ಕರುಳು ಸಂಬಂಧಿ ರೋಗಕ್ಕಿಡಾಗುವವರಿಗಾಗಿ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 5 ಹಾಸಿಗೆಗಳನ್ನು ಕಾಯ್ದಿರಿಸಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ದಾಖಲಾದರೆ ಸಂಬಂಧಪಟ್ಟ ತಾಲೂಕು ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹೋಟೆಲ್ಗಳಲ್ಲಿ, ರಸ್ತೆಯ ಬದಿಯ ಪಾನಿಪುರಿ ಇನ್ನಿತರ ಫಾಸ್ಟ್‌ಫುಡ್ ಸೆಂಟರ್‌ಗಳಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ತಿಳಿಸಬೇಕು. ಜತೆಗೆ ಶುದ್ಧ ಕುಡಿಯುವ ನೀರನ್ನು ಗ್ರಾಹಕರಿಗೆ ನೀಡಬೇಕು ಹಾಗೂ ಬಿಸಿ ನೀರು ನೀಡಲು ಅಧಿಕಾರಿಗಳು ನಿರ್ದೇಶನ ನೀಡಬೇಕು ಎಂದು ಹೇಳಿದರು.

    ಗ್ರಾಮೀಣ ಜನವಸತಿ ಪ್ರದೇಶಗಳಿಗೆ ನೀರನ್ನು ಸರಬರಾಜು ಮಾಡುವ ಮುನ್ನ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆಯ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟ ಪರಿಶೀಲಿಸಿ ನಂತರ ಸರಬರಾಜು ಮಾಡಬೇಕು ಎಂದು ಸೂಚಿಸಿದರು.

    ಬೋರ್ವೆಲ್ಗಳ ಸುತ್ತಲು ಫ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಿ ಚರಂಡಿ ನೀರು ಹೋಗದಂತೆ ತಡೆಯಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಸಹಾಯವಾಣಿ 0821-252 6355 ಅಥವಾ ಕಂಟ್ರೋಲ್ ರೂಂ. 0821-2423800, 1077 ಗೆ ಮಾಹಿತಿ ನೀಡಬಹುದು ಎಂದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪುಗಳು ರಸ್ತೆ, ಚರಂಡಿಗಳ ಮೂಲಕ ಹಾದು ಹೊಗಿ ಒಡೆದಿದ್ದರೆ ತಕ್ಷಣ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts