More

    ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

    ಬಳ್ಳಾರಿ : ಜನ ಸಾಮಾನ್ಯರಿಗೆ ಆರೋಗ್ಯ ಸೇವೆಗಳನ್ನು ಸಕಾಲದಲ್ಲಿ ತಲುಪಿಸುವಲ್ಲಿ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಅಭಿಯಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಗ್ರಾಮೀಣ ಭಾಗದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಸಂಗ್ರಹಣೆ ಇಟ್ಟುಕೊಳ್ಳಬೇಕು. ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಿಗೆ ಬರುವ ಸಾರ್ವಜನಿಕರಿಗೆ ಅಗತ್ಯ ಚಿಕಿತ್ಸೆ ಸೌಲಭ್ಯ ಒದಗಿಸಬೇಕು. ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

    ಗ್ರಾಮೀಣ ಭಾಗದಲ್ಲಿ ಹೆರಿಗೆಗಳು ಸಂಭವಿಸಿದಾಗ ಅಲ್ಲಿನ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕು. ಬದಲಾಗಿ ದೂರದ ನಗರದ ಆಸ್ಪತ್ರೆಗಳಿಗೆ ಶಿಫಾರಸು ಮಾಡುವಂತಿಲ್ಲ, ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಮಾತ್ರ ವಿಮ್ಸ್ ಅಥವಾ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಬೇಕು. ಬಾಣಂತಿಯರಿಗೆ ಪೌಷ್ಟಿಕ ಆಹಾರದ ಸೇವನೆಯ ಮಹತ್ವ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಶಾಕಾರ್ಯಕರ್ತೆಯರು ಬಾಣಂತಿಯರ ಕಾಳಜಿ ವಹಿಸಬೇಕು. ಇದರಿಂದ ಬಾಲ್ಯದಲ್ಲಿಯೇ ಶಿಶು ಮರಣ ಸಂಭವಿಸುವ ಸಾಧ್ಯತೆ ಕಡಿಮೆಯಾಗಲಿದೆ ಎಂದರು.

    ಮಹಿಳೆ ಗರ್ಭಿಣಿಯಂದು ತಿಳಿದ ತಕ್ಷಣ ತಾಯಿಕಾರ್ಡ್ ಒದಗಿಸಲಾಗುತ್ತದೆ. ಅದರಲ್ಲಿ ತಾಯಿಯ ಆರೋಗ್ಯಕ್ಕೆ ಸಂಬಂಧಿಸಿದ ತೂಕ, ಎತ್ತರ, ರಕ್ತದೊತ್ತಡ, ರಕ್ತದ ಗುಂಪು, ರಕ್ತದಲ್ಲಿಯ ಕಬ್ಬಿಣಾಂಶದ ಪ್ರಮಾಣ, ಟಿಡಿ ಲಸಿಕೆ ಪಡೆದ ವಿವರ ಹಾಗೂ ತಾಯಿಗೆ ಇರಬಹುದಾದ ಇತರ ಆರೋಗ್ಯದ ಸಮಸ್ಯೆಗಳ ಬಗ್ಗೆ ಮಾಹಿತಿ ಹಾಗೂ ಸ್ಕ್ಯಾನಿಂಗ್ ಮಾಡಿದಾಗ ಮಗುವಿನ ಆರೋಗ್ಯದ ವಿವರವನ್ನು ತಪ್ಪಿಲ್ಲದೆ ನಮೂದಿಸಬೇಕು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನ ಮೂಲಕ ಮಗುವಿನ ಭವಿಷ್ಯದ ದೃಷ್ಟಿಯಿಂದ ಬಾಲ್ಯದಲ್ಲಿ ಹಾಕುವಂತ ಹನ್ನೆರಡು ಮಾರಕ ರೋಗಗಳ ವಿರುದ್ಧದ ಹಾಕುವ ಲಸಿಕಾಕರಣದ ಪ್ರಗತಿಯ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಪಡೆದುಕೊಂಡರು.

    ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts