More

    ಮಕ್ಕಳ ಹಕ್ಕುಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ

    ಹೊಳೆನರಸೀಪುರ: ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆಗೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸೂಚಿಸಿದರು.

    ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅಗತ್ಯ ಸೌಲಭ್ಯಗಳು ದೊರೆಯುತ್ತಿದೆಯೇ, ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಅಗತ್ಯ ಮಾಹಿತಿ ನೀಡಲಾಗಿದೆಯೇ, ಶಾಲೆ ಬಿಟ್ಟ ಮಕ್ಕಳು ಮತ್ತೆ ಶಾಲೆಗೆ ಸೇರಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆಯೇ ಎಂದು ಪರಿಶೀಲಿಸಿದರು.

    ಶಿಕ್ಷಣ ಸಂಯೋಜಕ ಕಾಂತರಾಜು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿ ಹೇಳಲಾಗುತ್ತಿದೆ. ತಾಲೂಕಿನ ಬಹುತೇಕ ಎಲ್ಲ ಶಾಲೆಗಳಲ್ಲಿ ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಇದೆ. ಕೆಲವು ಶಾಲೆಗಳಲ್ಲಿ ಶೌಚಗೃಹ ನಿರ್ವಹಣೆಯಲ್ಲಿ ಲೋಪ ಕಂಡುಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ತಾಲೂಕಿನಲ್ಲಿ ಈ ವರ್ಷ 3 ಸರ್ಕಾರಿ ಶಾಲೆಗಳು ಮುಚ್ಚಿವೆ. 3 ಶಾಲೆಗಳಲ್ಲಿ 5 ಮಕ್ಕಳಿಗಿಂತ ಕಡಿಮೆ ಇದ್ದು, ಹಾಜರಾತಿ ಹೆಚ್ಚಿಸಿ ಶಾಲೆಗಳನ್ನು ಉಳಿಸಿಕೊಳ್ಳಲು ಗ್ರಾಮದ ಮುಖಂಡರೊಂದಿಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ವಿವರಿಸಿದರು.

    ನಗರಠಾಣೆ ಎಸ್.ಐ. ಅರುಣ್ ಮತನಾಡಿ, ಶಾಲಾ- ಕಾಲೇಜುಗಳಲ್ಲಿ ಫೋಕ್ಸೋ ಕಾಯ್ದೆ ಬಗ್ಗೆ ವಿವರಿಸಿದ್ದೆವೆ. ಬಾಲ್ಯ ವಿವಾಹ ತಡೆಗೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ತಾಲೂಕಿನಲ್ಲಿ ಫೋಕ್ಸೋ ಕಾಯ್ದೆ ಅಡಿಯಲ್ಲಿ 14 ಪ್ರಕರಣ ದಾಖಲಾಗಿದ್ದು, 2 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ ಎಂದು ವಿವರಿಸಿದರು.

    ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಅತ್ಯುತ್ತಮವಾದ ಆಹಾರ ನೀಡಬೇಕು. ಈ ಬಗ್ಗೆ ಮೇಲಿಂದ ಮೇಲೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ದಿನೇಶ್‌ಗೆ ವೆಂಕಟೇಶ್ ಸೂಚಿಸಿದರು.

    ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗೋಪಾಲ್, ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ, ಹಿಂದುಳಿದ ಇಲಾಖೆಗಳ ಅಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕೌಸರ್ ಅಹಮದ್, ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts