ತಾವರಗೇರಾ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪಕ್ಷದಿಂದ ಸಮೀಕ್ಷೆ ನಡೆಸಿದ್ದು, ಮತದಾರರು ಕಾಂಗ್ರೆಸ್ ಪರವಿದ್ದಾರೆ. ಈ ವರದಿಯಂತೆ ಪಕ್ಷ 120ಕ್ಕೂ ಅಧಿಕ ಸ್ಥಾನ ಪಡೆದು ಅಧಿಕಾರ ನಡೆಸಲಿದ್ದು, ಯಾವುದೇ ಅನುಮಾನ ಬೇಡ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಬದಲಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಶ್ರೀಸಾಮಾನ್ಯರ ಮೇಲೆ ಹೊರೆ ಹಾಕಿದೆ. ಈ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಪಕ್ಷ ಸಂಘಟನೆಗಾಗಿ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕುಷ್ಟಗಿ ಕ್ಷೇತ್ರದಲ್ಲಿ ಶಾಸಕ ಬಯ್ಯಪುರ ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಇತರರಿದ್ದರು.