

ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ(2025) ಫೆಬ್ರವರಿಯಿಂದ ಮಾರ್ಚ್ ರವರೆಗೆ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದಿ ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ.
2008 ರಲ್ಲಿ ನಡೆದ ಏಷ್ಯಾ ಕಪ್ ನಂತರ, ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿರುವ ಕಾರಣ ಭಾರತವು ಪಾಕಿಸ್ತಾನದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಾವಳಿಯನ್ನು ಆಡಿಲ್ಲ. ಪರಿಸ್ಥಿತಿ ಹಾಗೆಯೇ ಮುಂದುವರಿದಿರುವುದರಿಂದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈನಲ್ಲಿ ಆಯೋಜಿಸಲು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ವಿನಂತಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಡಿಸೆಂಬರ್ 2012 ರಿಂದ ಜನವರಿ 2013 ರವರೆಗೆ ಭಾರತದಲ್ಲಿ ನಡೆದ ಪಂದ್ಯಗಳು ಉಭಯ ದೇಶಗಳ ನಡುವಿನ ಕೊನೆಯ ಸರಣಿಯಾಗಿದೆ. ಅಂದಿನಿಂದ, ಉಭಯ ದೇಶಗಳು ಐಸಿಸಿ ಟೂರ್ನಿಗಳು ಮತ್ತು ಏಷ್ಯಾ ಕಪ್‌ನಲ್ಲಿ ಮಾತ್ರ ಸ್ಪರ್ಧಿಸುತ್ತಿವೆ.
ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಮುಂಬರುವ ಈವೆಂಟ್‌ನಲ್ಲಿ ಭಾರತದ ಭಾಗವಹಿಸುವಿಕೆಯ ಬಗ್ಗೆ ಅನಿಶ್ಚಿತತೆ ಹಾಗೆಯೇ ಉಳಿದಿದೆ. ತನ್ನ ಎಲ್ಲಾ ಪಂದ್ಯಗಳನ್ನು ಒಂದೇ ನಗರದಲ್ಲಿ ಆಡುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಭಾರತ ತನ್ನ ಎಲ್ಲಾ ಪಂದ್ಯಗಳನ್ನು ಆಡುವ ಸ್ಥಳವಾಗಿ ಲಾಹೋರ್ ಅನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಆದರೆ, ಭಾರತೀಯ ಕ್ರಿಕೆಟ್ ಮಂಡಳಿಯು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ.
ಈ ನಿಟ್ಟಿನಲ್ಲಿ, 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಮೇ ತಿಂಗಳ ಆರಂಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದರು.