ಉತ್ತರ ಪ್ರದೇಶದಲ್ಲಿ ಬಿಜೆಪಿ ವೈಟ್​ವಾಷ್​ ಆಗಲಿದೆ: ತೇಜಸ್ವಿ ಯಾದವ್​

ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಈ ಬಾರಿ ವೈಟ್​ವಾಷ್​ ಆಗಲಿದೆ ಎಂದು ಆರ್​ಜೆಡಿ ಮುಖಂಡ ತೇಜಸ್ವಿ ಯಾದವ್​ ಅಭಿಪ್ರಾಯಪಟ್ಟಿದ್ದಾರೆ.

ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಯಾದವ್,​ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್​ ಯಾದವ್​ ಅವರು ಮೈತ್ರಿ ಮಾಡಿಕೊಂಡಿರುವ ನಿರ್ಧಾರವನ್ನು ಜನರು ಸ್ವಾಗತಿಸಿದ್ದಾರೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ. ಎಸ್​ಪಿ-ಬಿಎಸ್​ಪಿ ಮೈತ್ರಿ ಕೂಟ ಎಲ್ಲ ಸ್ಥಾನಗಳಲ್ಲೂ ಜಯಗಳಿಸಲಿದೆ. ಆರ್​ಜೆಡಿ ಮುಖ್ಯಸ್ಥ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಸಹ ಬಿಹಾರ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆರ್​ಜಿಡಿ ಮತ್ತು ನಿತೀಶ್​ ಕುಮಾರ್​ ನೇತೃತ್ವದ ಜೆಡಿಯು ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಸೋಲಿಸಿದ್ದವು. ಆದರೆ ಬದಲಾದ ಸನ್ನಿವೇಶದಲ್ಲಿ ನಿತೀಶ್​ ಕುಮಾರ್​ ಆರ್​ಜೆಡಿ ಜತೆ ಮೈತ್ರಿ ಕಡಿದುಕೊಂಡು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ.

ಪ್ರಸ್ತುತ ಬಿಹಾರದಲ್ಲಿ ಕಾಂಗ್ರೆಸ್​ ಪಕ್ಷ ಉಪೇಂದ್ರ ಕುಷ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಸಮತಾ ಪಕ್ಷ, ಹಿಂದುಸ್ತಾನಿ ಆವಾಮಿ ಮೋರ್ಚಾ (ಎಸ್​) ಮತ್ತು ಮುಖೇಶ್​ ಸಹಾನಿ ನೇತೃತ್ವದ ವಿಕಾಸಶೀಲ ಇನ್ಸಾನ್​ ಪಕ್ಷ (ವಿಐಪಿ) ಮಹಾಘಟಬಂಧನ ರಚಿಸಿಕೊಂಡಿವೆ. (ಏಜೆನ್ಸೀಸ್​)