ಸೋಷಿಯಲ್ ಮೀಡಿಯಾದಲ್ಲಿ ಸಿಎಂಗೆ ಅವಹೇಳನ ಮಾಡುತ್ತಿದ್ದ ಯುವಕನನ್ನು ಪೊಲೀಸರು ಎಲ್ಲಿಗೆ ಕಳಿಸಿದರು ನೋಡಿ!

Crime
Published on

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಹಾಗೂ ನಗರ ಪೊಲೀಸ್ ಆಯುಕ್ತರ ಕುರಿತು ನಿಂದನಾತ್ಮಕ ವಿಡಿಯೋಗಳನ್ನು ಹರಿಯಬಿಡುತ್ತಿದ್ದ ವ್ಯಕ್ತಿಯನ್ನು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿಲೇಔಟ್ ನಿವಾಸಿ ಸುಧೀರ್ (35) ಬಂಧಿತ. ಬುಧವಾರ ಮಧ್ಯಾಹ್ನ ಕೋರ್ಟ್‌ಗೆ ಹಾಜರುಪಡಿಸಿ, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

9 ವರ್ಷದ ಹಿಂದೆ ಸುಧೀರ್‌ನ ಸಾಕಿದ್ದ ನಾಯಿ ಸತ್ತಿತ್ತು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಧಿಕಾರಿಗಳ ಹೆಸರು ಕೇಳಿದರೆ ಅವಾಚ್ಯವಾಗಿ ನಿಂದಿಸುತ್ತಿದ್ದ. ಹೀಗಾಗಿ, ಪಾಲಕರು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಗುಣಮುಖನಾಗಿರಲಿಲ್ಲ. ಇತ್ತೀಚೆಗೆ ೇಸ್‌ಬುಕ್ ಖಾತೆಯಲ್ಲಿ ಮುಖ್ಯಮಂತ್ರಿ ಹಾಗೂ ನಗರ ಪೊಲೀಸ್ ಆಯುಕ್ತರ ಕುರಿತು ಅವಹೇಳನಕಾರಿ ಮತ್ತು ನಿಂದನಾತ್ಮಕ ವಿಡಿಯೋಗಳನ್ನು ಹರಿಯಬಿಡುತ್ತಿದ್ದ.

ಇದು ನಮ್ಮ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆರೋಪಿಯ ಮಾಹಿತಿ ಸಂಗ್ರಹಿಸಲಾಗಿತ್ತು. ಈ ಸಂಬಂಧ ಬುಧವಾರ ಮಧ್ಯಾಹ್ನ ಆರೋಪಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಪೇದೆ ಅನಂತರಾಜು ತೆರಳಿದ್ದರು. ಈ ವೇಳೆ ಆರೋಪಿಯು ಪೇದೆ ಅನಂತರಾಜು ಮೇಲೆ ಹಲ್ಲೆ ನಡೆಸಿದ್ದ. ಅಲ್ಲದೆ, ಮೈಮೇಲಿನ ಬಟ್ಟೆ ಹರಿದು ಹಾಕಿದ್ದ. ಹೀಗಾಗಿ ಪ್ರಕರಣ ದಾಖಲಿಸಿ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಮಾನಸಿಕ ಖಿನ್ನತೆಗೆ ಒಳಗಾಗಿರುವ ವಿಚಾರ ಗೊತ್ತಾಗಿದೆ. ಬಳಿಕ ಕೋರ್ಟ್‌ಗೆ ಹಾಜರುಪಡಿಸಿ, ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net