ಗುಂಡ್ಲುಪೇಟೆ; ತಾಲೂಕಿನ ಕಂದೇಗಾಲ ಸಮೀಪದ ಸ್ಕಂದಗಿರಿ ಸೋಮೇಶ್ವರಸ್ವಾಮಿ ಪಾರ್ವತಾಂಬ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಜಯಘೋಷದ ನಡುವೆ ವಿಜೃಂಭಣೆಯಿಂದ ಜರುಗಿತು.

ಮುಂಜಾನೆಯೇ ವಿಶೇಷ ಪೂಜೆ ನೆರವೇರಿಸಿದ ನಂತರ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಕೂರಿಸಲಾಯಿತು.
ಮಧ್ಯಾಹ್ನ 12 ಗಂಟೆಗೆ ಮುಜರಾಯಿ ಅಧಿಕಾರಿಯೂ ಆದ ತಹಸೀಲ್ದಾರ್ ಟಿ.ರಮೇಶ್ ಬಾಬು, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಭಕ್ತರು ರಥವನ್ನು ಎಳೆಯಲಾರಂಭಿಸಿದರು. ಬೆಟ್ಟದ ತಪ್ಪಲಿನಲ್ಲಿ ಒಂದು ಸುತ್ತು ಹಾಕಿದ ರಥವನ್ನು ಸ್ವಸ್ಥಾನಕ್ಕೆ ಸೇರಿಸಿದ ನಂತರ ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿನಿಯೋಗ ಮಾಡಲಾಯಿತು. ಕಂದೇಗಾಲ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜನರು ಜಾತ್ರೆಯ ಉಸ್ತುವಾರಿ ವಹಿಸಿಕೊಂಡಿದ್ದರು.
ಮೂರು ವರ್ಷದ ಹಿಂದೆ ಇಬ್ಬರು ಭಕ್ತರು ರಥದ ಚಕ್ರಕ್ಕೆ ಸಿಲುಕಿ ಒಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಈ ಬಾರಿ ಪೊಲೀಸರು ಬಿಗಿ ಬಂದೋಬಸ್ತ್ ಆಯೋಜಿಸಿದ್ದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರಥೋತ್ಸವ ಸಂದರ್ಭದಲ್ಲಿ ಹಾಜರಿದ್ದರು.