

ಚನ್ನಪಟ್ಟಣ: ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಚನ್ನಪಟ್ಟಣದಲ್ಲಿ ನಡೆದ "ಕೃತಜ್ಞತಾ ಸಮಾವೇಶ"ದಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. ಇದು ಋಣ ತೀರಿಸುವ ಕಾರ್ಯಕ್ರಮ. ನೀವು ನಮಗೆ ಕೊಟ್ಟ ಶಕ್ತಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ ಮಾಡಿದ್ದೇವೆ. ಬೆಳಗಾವಿ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು 2 ಬಾರಿ ಮುಂದೂಡಲಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಕಾಲಿಗೆ ಪೆಟ್ಟಾಗಿದ್ದು, ವೈದ್ಯರ ಸಲಹೆ ಮೇರೆಗೆ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ" ಎಂದು ತಿಳಿಸಿದರು. "ಈ ಚುನಾವಣೆಯಲ್ಲಿ ಹಗಲು ರಾತ್ರಿ ಶ್ರಮಿಸಿದ ಎಲ್ಲಾ ನಾಯಕರು, ಮಂತ್ರಿಗಳು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಅಭಿವೃದ್ಧಿಗೆ ಮತ ಕೊಟ್ಟಿದ್ದೀರಿ. ನಾನು 1989ರಿಂದ ಈ ಜಿಲ್ಲೆಯ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಿಸಿದ್ದೀರಿ ಎಂದರು.
ನಮ್ಮನ್ನು ಟೀಕಿಸಿದವರಿಗೆ ತಟ್ಟೆ ಮರೆ ಏಟಿನ ಉತ್ತರ:
ನಾನು ಯಾರನ್ನೂ ಟೀಕಿಸುವ ಅಗತ್ಯವಿಲ್ಲ. ನಮ್ಮನ್ನು ಅಪೂರ್ವ ಸಹೋದರರು ಎಂದವರು, ನಮ್ಮ ಬಗ್ಗೆ ತುಚ್ಛವಾಗಿ ಮಾತನಾಡಿದ ದೇವೇಗೌಡರು, ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ಹಾಗೂ ದಳದ ಎಲ್ಲ ನಾಯಕರಿಗೆ ನಿಮ್ಮ ತಟ್ಟೆ ಮರೆ ಏಟು ಉತ್ತರವಾಗಿದೆ. ನೀವು ಕೇವಲ ಚನ್ನಪಟ್ಟಣಕ್ಕೆ ಮಾತ್ರ ಉತ್ತರ ನೀಡಿಲ್ಲ, ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದೀರಿ. ನಮ್ಮ ಅಧಿಕಾರ ನಶ್ವರ, ನಾವು ಮಾಡುವ ಸಾಧನೆ ಅಜರಾಮರ, ಮತದಾರರೇ ಈಶ್ವರ" ಎಂದು ಹೇಳಿದರು.
ಈ ಕ್ಷೇತ್ರದಲ್ಲಿ ಶಾಸಕ ಸ್ಥಾನ ಖಾಲಿಯಾದ ಬಳಿಕ, ನಾನು ಕ್ಷೇತ್ರದ ಪ್ರತಿ ಹೋಬಳಿಗೆ ಬಂದು ಮನೆ ಬಾಗಿಲಿಗೆ ಸರ್ಕಾರವನ್ನು ತಂದು 25 ಸಾವಿರಕ್ಕೂ ಹೆಚ್ಚು ಜನರ ಅರ್ಜಿ ಸ್ವೀಕರಿಸಿದ್ದೇನೆ. 19 ಸಾವಿರಕ್ಕೂ ಹೆಚ್ಚು ಜನ ಮನೆ, ನಿವೇಶನ, ಪಹಣಿ ಇಲ್ಲ ಎಂದು ಅರ್ಜಿ ಸಲ್ಲಿಸಿದ್ದೀರಿ. ಚುನಾವಣೆಗೂ ಮುನ್ನ ಈ ಕ್ಷೇತ್ರ ನನ್ನ ಜವಾಬ್ದಾರಿ ಎಂದು ಮಾತು ಕೊಟ್ಟಿದ್ದೆ. ನಾನು ಈಗಲೂ ಹೇಳುತ್ತೇನೆ. ಇಲ್ಲಿ ಯೋಗೇಶ್ವರ್ ಮಾತ್ರವಲ್ಲ, ನಾನು ಕೂಡ ಕ್ಷೇತ್ರದ ಅಭ್ಯರ್ಥಿಯೇ. ನಾನು ಯೋಗೇಶ್ವರ್, ಬಾಲಕೃಷ್ಣ, ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ, ರವಿ, ರಾಮೋಜಿ ಗೌಡ ಸೇರಿ ಡಿ.ಕೆ. ಸುರೇಶ್ ಅವರ ಸಹಕಾರದಲ್ಲಿ ಜಿಲ್ಲೆಯಲ್ಲಿ ಬದಲಾವಣೆ ತರುತ್ತೇವೆ" ಎಂದು ಭರವಸೆ ನೀಡಿದರು.
ನಾನು ಮುಂದಿನ ಒಂದು ವಾರದಲ್ಲಿ ಮತ್ತೆ ಕ್ಷೇತ್ರಕ್ಕೆ ಬಂದು ಕೊಟ್ಟ ಮಾತು ಈಡೇರಿಸುವ ಕೆಲಸದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಚುನಾವಣೆ ಸಮಯದಲ್ಲಿ ನಾನು ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದೆ. ನೀವು ಶಾಸಕರಾಗಿ ಮುಖ್ಯಮಂತ್ರಿಯಾಗಿ ಯಾವ ಸಾಧನೆ ಮಾಡಿದ್ದೀರಿ ಎಂದು. ಯೋಗೇಶ್ವರ್ ಅವರು ಅನೇಕ ದೇವಾಲಯ ಕಟ್ಟಿಸಿದ್ದಾರೆ, ನೀವು ಯಾವ ದೇವಾಲಯ ಕಟ್ಟಿದ್ದೀರಿ, ಶಾಲೆಗಾಗಿ ನೀವು 2 ಎಕರೆ ಜಮೀನು ದಾನ ಮಾಡಿದ್ದೀರಾ ಎಂದು ಸವಾಲು ಹಾಕಿದ್ದೆ. ನನ್ನ ಪ್ರಶ್ನೆಗೆ ಅವರಿಂದ ಉತ್ತರ ಬರಲಿಲ್ಲ" ಎಂದರು.