More

    150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಶೀಘ್ರ

    ಪಿರಿಯಾಪಟ್ಟಣ: ತಾಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಜನವರಿ ತಿಂಗಳ ಕೊನೆಯ ವಾರದಲ್ಲಿ (24 ಅಥವಾ 25 ರಂದು) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.


    ತಾಲೂಕಿನ ಮುತ್ತಿನ ಮುಳ್ಳುಸೋಗೆ ಬಳಿ ನಡೆಯುತ್ತಿರುವ ಅಂತಿಮ ಹಂತದ ಕಾಮಗಾರಿಗಳನ್ನು ಬುಧವಾರ ಪರಿಶೀಲನೆ ನಡೆಸಿ ಮಾತನಾಡಿದರು. 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು 6 ವರ್ಷಗಳ ಬಳಿಕ ಈ ಯೋಜನೆಯನ್ನು ಅವರೇ ಉದ್ಘಾಟಿಸುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದರು.


    ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು, ಈಗಾಗಲೇ ಈ ಯೋಜನೆಯ ಶೇ.98ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು ಇನ್ನು 15 ದಿನದಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಿರಿಯಾಪಟ್ಟಣದ ಒಳಚರಂಡಿ ಯೋಜನೆ ಕಾಮಗಾರಿಯೂ ಮುಕ್ತಾಯ ಹಂತದಲ್ಲಿದ್ದು ಅಂದೇ ಮುಖ್ಯಮಂತ್ರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.


    ವೇದಿಕೆ ಕಾರ್ಯಕ್ರಮ ನಡೆಸಲು ಕೊಪ್ಪ, ಬೆಟ್ಟದಪುರ ಮತ್ತು ಪಿರಿಯಾಪಟ್ಟಣ ಸೇರಿದಂತೆ ಈ ಮೂರು ಸ್ಥಳಗಳಲ್ಲಿ ಸೂಕ್ತವಾದ ಒಂದನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.


    ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ವೆಂಕಟೇಶ್, ಎಸ್‌ಇ ರಘುಪತಿ, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರಾದ ನಿತಿನ್ ವೆಂಕಟೇಶ್, ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts