ಮಲೇರಿಯಾ ನಿಯಂತ್ರಣ ಜಾಗೃತಿ ಜಾಥಾ


ವಿಜಯವಾಣಿ ಸುದ್ದಿಜಾಲ ಹಾಸನ
ಮಲೇರಿಯಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಕಾಯಿಲೆ ಬಾರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ವಿಜಯಪ್ರಕಾಶ್ ಸಲಹೆ ನೀಡಿದರು.
ನಗರದ ಗಂಧದಕೊಠಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ ಮಲೇರಿಯಾ ನಿಯಂತ್ರಣ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಮಲೇರಿಯಾ ತಡೆಯುವಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದ್ದು, ಜಾಗೃತಿ ಅರಿವು ಕಾರ್ಯಕ್ರಮಗಳಲ್ಲಿ ಇಲಾಖೆಗಳೊಂದಿಗೆ ಕೈಜೋಡಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಸೊಳ್ಳೆಗಳ ಉತ್ಪತ್ತಿ ತಡೆಗೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮನೆಗಳಲ್ಲಿ ಸೊಳ್ಳೆ ಪರದೆ ಬಳಸಿ ಕಾಯಿಲೆಗಳಿಂದ ದೂರವಿರಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್‌ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರಾಜ್‌ಗೋಪಾಲ್, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಆರಾಧ್ಯ, ವಿಭಜಿತ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಪಿ ಸುರೇಶ್ ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *