More

  ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಕರ ಪಾತ್ರ ಬಹುಮುಖ್ಯ

  ನಾಪೋಕ್ಲು: ಭಾರತದ ಪ್ರಜಾಪ್ರಭುತ್ವದ ಯಶಸ್ಸಿಗೆ ಯುವ ಜನತೆಯ ಪಾತ್ರ ಬಹು ಮುಖ್ಯವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಪವಿತ್ರಾ ರೈ ಅಭಿಪ್ರಾಯಪಟ್ಟರು.

  ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಐಕ್ಯೂಎಸಿ, ಎನ್‌ಎಸ್‌ಎಸ್ ಹಾಗೂ ಮತದಾರರ ಸಾಕ್ಷರತಾ ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ನಮ್ಮ ಸರ್ಕಾರ ಹಾಗೂ ಮತದಾನದ ವ್ಯವಸ್ಥೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

  ಸ್ವಾತಂತ್ರ, ಸಮಾನತೆ, ನ್ಯಾಯ, ಬ್ರಾತೃತ್ವ ಪ್ರಜಾಪ್ರಭುತ್ವದ ಮೂಲ ಆಧಾರ ಅಂಶಗಳಾಗಿವೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.

  ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಇಡೀ ವಿಶ್ವವೇ ಭಾರತದ ಚುನಾವಣೆಯನ್ನು ಬಹಳ ಕುತೂಹಲದಿಂದ ನೋಡುತಿದ್ದು ಭಾರತದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿಯಾಗಿದೆ .ಚುನಾವಣೆಯು ಎಲ್ಲರ ಹಕ್ಕಾಗಿದ್ದು ನಮ್ಮ ಹಕ್ಕನ್ನು ನಾವು ಚಲಾಯಿಸುವುದು ಮುಖ್ಯವಾಗುತ್ತದೆ ಎಂದರು.

  ಅಧ್ಯಕ್ಷತೆ ವಹಿಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಮಾತನಾಡಿ, ನಮ್ಮ ಸಂವಿಧಾನವು ನಮಗೆ ಸರ್ಕಾರದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮತದಾನದ ಹಕ್ಕನ್ನು ಕೊಟ್ಟಿದ್ದು ಪ್ರಜಾಪ್ರಭುತ್ವದ ಕಲ್ಪನೆ ಸಾಕಾರಗೊಳ್ಳಲು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.

  ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಹೇಮಾ ಬಿ.ಡಿ., ಶಶಿಕಲಾ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts