More

    ವಾರಾಂತ್ಯದ ಕರ್ಫ್ಯೂ ಇಂದಿನಿಂದ ಜಾರಿ

    ಗದಗ: ಜಿಲ್ಲಾದ್ಯಂತ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ 5 ಗಂಟೆವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ತುರ್ತು ಕಾರ್ಯಗಳಿಗೆ ಜನರ ಅಗತ್ಯತೆಗಳನ್ನು ಪೂರೈಸಲು ಸಾರ್ವಜನಿಕ ಸಾರಿಗೆಗಳು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರ ನಿರ್ದೇಶನಗಳ ಅನುಸಾರ ಕಾರ್ಯಾಚರಣೆ ಮಾಡಲಿದ್ದು, ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾನೂನಿನಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಕರೊನಾ ಸೋಂಕು ವ್ಯಾಪಕವಾಗುತ್ತಿದ್ದು, ಗುರುವಾರ ಮತ್ತೆ 10ಕ್ಕೂ ಹೆಚ್ಚು ಕರೊನಾ ಕೇಸ್​ಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯ ಸುರಕ್ಷೆಯತ್ತ ಹೆಚ್ಚು ಗಮನ ನೀಡಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

    ಸರ್ಕಾರದ ಮಾರ್ಗಸೂಚಿಗಳನ್ವಯ ಜ. 5ರ ರಾತ್ರಿ 10 ಗಂಟೆಯಿಂದ ಜ. 19ರ ಬೆಳಗ್ಗೆ 5 ಗಂಟೆವರೆಗೆ ಆದೇಶವು ಜಾರಿಯಲ್ಲಿರಲಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಅನುಸಾರ ಜಿಲ್ಲಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದೆ. ಈ ಅವಧಿಯಲ್ಲಿ ಎಲ್ಲ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದವರೆಗೆ ಕಾರ್ಯನಿರ್ವಹಿಸುತ್ತವೆ.

    ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು. ಧಾರ್ವಿುಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿಲ್ಲ. ಯಾವುದೇ ಸಮಯದಲ್ಲಿ ಪೂರ್ಣಪ್ರಮಾಣದ ಕೋವಿಡ್-19 ಲಸಿಕೆಯನ್ನು ಪಡೆದಿರುವ 50 ಜನರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ಇರಲಿದೆ. ಮಾಲ್​ಗಳು, ವಾಣಿಜ್ಯ ಸಂಕೀರ್ಣಗಳು, ಎಲ್ಲಾ ಕಟ್ಟಡದಲ್ಲಿನ ಅಂಗಡಿಗಳು ಮತ್ತು ವಾಣಿಜ್ಯ ಸ್ಥಳಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಬೇಕು. ಈಜುಕೊಳಗಳು ಮತ್ತು ಜಿಮ್ಳು, ಕ್ರೀಡಾ ಸಂಕೀರ್ಣಗಳು ಮತ್ತು ಆಟದ ಮೈದಾನಗಳು ಸಾಮರ್ಥ್ಯದ ಶೇ. 50ರಷ್ಟು ಮಾತ್ರ ಕಾರ್ಯಾಚರಿಸಬೇಕು. ಎಲ್ಲಾ ರೀತಿಯ ರ್ಯಾಲಿ, ಧರಣಿ, ಮುಷ್ಕರಗಳನ್ನು ನಿರ್ಬಂಧಿಸಲಾಗಿದೆ.

    ತುರ್ತ, ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿ, ಸಿಬ್ಬಂದಿಗೆ ಅನಿರ್ಬಂಧಿತ ಓಡಾಟಕ್ಕೆ ಅವಕಾಶ ನೀಡಬೇಕು. ನೌಕರರು ಆಯಾ ಸಂಘ, ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಬಹುದು. ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು, ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಸಂಚರಿಸಬಹುದು.

    ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್​ಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು, ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ ಇದೆ. ರೆಸ್ಟೋರೆಂಟ್ ಮತ್ತು ಹೋಟೆಲ್​ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts