More

    ಕಸಾಪದಿಂದ ಕನ್ನಡದ ಮನಸ್ಸುಗಳನ್ನು ಬೆಸೆಯುವ ಕೆಲಸ

    ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ, ಸಾಹಿತ್ಯ ಮತ್ತು ಸಾಂಸ್ಕೃತಿಕ ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡುತ್ತಿದ್ದು, ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ದೂರದೃಷ್ಟಿ ಅದ್ಭುತವಾಗಿದೆ ಎಂದು ಹಿರಿಯ ಪತ್ರಕರ್ತ ಭೀಮರಾಯ ಹದ್ದಿನಾಳ ಹೇಳಿದರು.
    ಸ್ಥಳೀಯ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಭಾನುವಾರ ಏರ್ಪಡಿಸಿದ್ದ ಪರಿಷತ್‌ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೃಷ್ಣರಾಜ ಒಡೆಯರ್ 1915ರಲ್ಲಿ ಸ್ಥಾಪಿಸಿದ ಸಂಸ್ಥೆ ಇಂದು ಬೃಹತ್ ಸಂಸ್ಥೆಯಾಗಿ ಬೆಳೆದಿದ್ದು, ಕನ್ನಡದ ಅಸ್ಮಿತೆಯ ಸಂಸ್ಥೆಯಾಗಿದೆ ಎಂದರು.
    ಕನ್ನಡದ ನೆಲ, ಜಲ, ಸಾಹಿತ್ಯದ ವಿಷಯಕ್ಕೆ ಬಂದಾಗ ಪರಿಷತ್ ಮುಂಚೂಣಿಯಲ್ಲಿರುತ್ತಿದ್ದು, ಸಾಹಿತ್ಯವನ್ನು ಅಧ್ಯಯನ ಮಾಡಿದರಿಗೆ ಮತ್ತು ಬರಹಗಾರರಿಗೆ ಪರಿಷತ್ ಉತ್ತಮ ವೇದಿಕೆ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
    ಹಿರಿಯ ರಂಗಕರ್ಮಿ ವಿ.ಎನ್.ಅಕ್ಕಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ, ಕಲೆ, ಜನಪದ, ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಮಹದಾಶಯದೊಂದಿಗೆ ಸ್ಥಾಪನೆಯಾದ ಕನ್ನಡಿಗರ ಸಾಂಸ್ಕೃತಿಕ ಮೇರು ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಆಗಿದೆ ಎಂದರು.
    ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಮಾತನಾಡಿ, ಪರಿಷತ್ತು ಸಾಹಿತ್ಯ, ಭಾಷೆಯನ್ನು ಬೆಳೆಸಲು ತನ್ನದೇ ಆದ ರೀತಿಯಲ್ಲಿ ಸೇವೆ ಮಾಡುತ್ತಿದೆ. ಇಂತಹ ಸಂಸ್ಥೆಯನ್ನು ಕನ್ನಡಿಗರಾದ ನಾವು ಉಳಿಸಿ ಬೆಳಸಬೇಕಾಗಿದೆ. ಪರಿಷತ್‌ನಿಂದ ಕನ್ನಡ ಭವನದಲ್ಲಿ ಗ್ರಂಥಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ಅಕ್ಕ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಸರ್ವಮಂಗಳ ಸಕ್ರಿ, ಕನ್ನಡ ಪರ ಹೋರಾಟಗಾರ ಗೋವಿಂದರಾಜುಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಸಿ.ಬಿ.ಪಾಟೀಲ್, ಸಾಹಿತಿ ವೀರಹನುಮಾನ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ತಾಯಪ್ಪ ಹೊಸೂರು, ಪದಾಕಾರಿಗಳಾದ ರಾವುತ್‌ರಾವ್ ಬರೂರ, ವಿಜಯರಾಜೇಂದ್ರ, ರೇಖಾ ಬಡಿಗೇರ, ರಾಜಾಶಂಕರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts