ಹನೂರು: ತಾಲೂಕಿನ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ನೀಡಿದರು.
ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಹನೂರು ಕ್ರಿಕೆಟ್ ಕ್ಲಬ್ ವತಿಯಿಂದ 3 ದಿನಗಳ ಕಾಲ ಆಯೋಜಿಸಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ತಾಲೂಕಿನಲ್ಲಿ ಯುವ ಕ್ರೀಡಾಪುಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ದಿಸೆಯಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸುವುದರ ಮೂಲಕ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಬೇಕು. ಈ ಮೂಲಕ ತಾಲೂಕಿಗೆ ಕೀರ್ತಿ ತರಬೇಕು. ಇದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.
ಇನ್ನು ಹನೂರಿನ ಕ್ರೀಡಾಂಗಣದಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಅಭಿವೃದ್ಧಿ ಪಡಿಸುವ ಸಂಬಂಧ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಜತೆಗೆ ಹೋಬಳಿಗಳಲ್ಲೂ ಸಹ ಕ್ರೀಡಾಂಗಣ ಸ್ಥಾಪನೆಯಾಗಬೇಕಿದ್ದು, ಈ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಜೆಡಿಎಸ್ ಜಿಲ್ಲಾ ವಕ್ತರಾ ಸೈಯದ್ ಅಕ್ರಂ, ಮುಖಂಡರಾದ ರಾಜುಗೌಡ, ವಿಜಯ್, ಸತೀಶ್, ಪ್ರಶಾಂತ್, ಕುಮಾರ್ ಹಾಗೂ ಕ್ರಿಕೆಟ್ ಕ್ಲಬ್‌ನ ಪದಾಧಿಕಾರಿಗಳು ಇದ್ದರು.