ಆಪ್‌ನೊಂದಿಗಿನ ಮೈತ್ರಿಯನ್ನು ಕಾಂಗ್ರೆಸ್‌ ಕೈಬಿಟ್ಟಿದೆ: ಅರವಿಂದ ಕೇಜ್ರಿವಾಲ್‌

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ ಹೆಚ್ಚು ಕಮ್ಮಿ ನಿರಾಕರಿಸಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸೇರಿ ಕಳೆದ ರಾತ್ರಿ ನಡೆದ ವಿಪಕ್ಷಗಳ ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಷ್ಟ್ರದ ಬಗ್ಗೆ ಚಿಂತಿತರಾಗಿದ್ದೇವೆ. ಹಾಗಾಗಿ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿದ್ದೇವೆ. ಆದರೆ, ಕಾಂಗ್ರೆಸ್‌ ಬಹುತೇಕ ಮೈತ್ರಿ ಇಲ್ಲ ಎಂದು ಹೇಳಿದೆ ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ದೆಹಲಿಯ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಲೋಕಸಭಾ ಚುನಾವಣೆಯ ಕುರಿತು ತಂತ್ರವನ್ನು ರೂಪಿಸಲು ಆಯೋಜಿಸಲಾಗಿದ್ದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಪ್ರತಿಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.
ಸಭೆಯ ನಂತರ ಮಾತನಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷವು ಪಶ್ಚಿಮ ಬಂಗಾಳ ಮತ್ತು ನವದೆಹಲಿಯಲ್ಲೂ ಕೂಡ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧವಿದೆ. ನಾವು ಪರಸ್ಪರ ಸ್ಪರ್ಧಿಸಲಿದ್ದೇವೆ ಎಂದು ಹೇಳಿದ್ದರು.

ಒಟ್ಟಿನಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರಗಿಡಲು ವಿಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಕುರಿತು ಇನ್ನಷ್ಟೇ ಸೂಕ್ತ ಮಾಹಿತಿ ತಿಳಿದುಬರಬೇಕಿದೆ. (ಏಜೆನ್ಸೀಸ್)