More

    ಈ ಬಾರಿ ಸರಳ ಗಣರಾಜ್ಯೋತ್ಸವಕ್ಕೆ ನಿರ್ಧಾರ

    ಬೆಳಗಾವಿ : ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಜ. 26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣರಾಜ್ಯೋತ್ಸವ ಆಚರಿಸಲಾಗುವುದು. ಶಾಲಾ ಮಕ್ಕಳಿಂದ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸ್ಕೌಟ್ಸ್ ಎನ್‌ಸಿಸಿ ಪರೇಡ್ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಪರೇಡ್‌ಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಪೂರ್ವಾಭ್ಯಾಸ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಸಮಾರಂಭದ ವೇದಿಕೆಯ ಸಿದ್ಧತೆ, ಆಸನ, ಧ್ವನಿವರ್ಧಕ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯ ಒದಗಿಸಲು ಸಂಬಂಧಿತ ಇಲಾಖೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ಉಪ ಸಮಿತಿಗಳು ಸಭೆ ನಡೆಸಿ ಎಲ್ಲ ಪೂರ್ವಸಿದ್ಧತೆ ಖಚಿತಪಡಿಸಿಕೊಳ್ಳಬೇಕು. ಎಲ್ಲ ದೇವಾಲಯ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ವ್ಯಾಪ್ತಿಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಿಹಿ ಹಂಚಲು ಆಸಕ್ತರಾಗಿರುವ ಸಂಘ-ಸಂಸ್ಥೆಗಳು ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿದರು.

    ಧ್ವಜಸಂಹಿತೆ ಪಾಲಿಸಲು ಸೂಚನೆ: ಜಿಲ್ಲೆಯ ಎಲ್ಲ ಕಡೆಗಳಲ್ಲೂ ಕಟ್ಟುನಿಟ್ಟಾಗಿ ಧ್ವಜಸಂಹಿತೆ ಪಾಲಿಸಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರಧ್ವಜಕ್ಕೆ ಅವಮಾನ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪಾಲ್ಗೊಳ್ಳುವ ಸಾರ್ವಜನಿಕರು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಬೆಳಗ್ಗೆ 7.15ರಿಂದ 8.15ರ ಒಳಗೆ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜ್‌ಗಳಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಒಳಗೊಂಡ ಆರೋಗ್ಯ ಇಲಾಖೆಯ ತಂಡ ನಿಯೋಜಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್‌ಕುಮಾರ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts