

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)(Muda Scam) ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ನಾಳೆ (ಸೆಪ್ಟೆಂಬರ್ 24) ಹೈಕೋರ್ಟ್ ಪ್ರಕಟಿಸಲಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಮಂಗಳವಾರ ಮಧ್ಯಾಹ್ನ 12ಗಂಟೆಗೆ ಪ್ರಕಟಿಸಲಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು.
ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿದ್ದು ಈಗ ವಿವಾದದ ಕೇಂದ್ರಬಿಂದುವಾಗಿದೆ.