More

    ಚಿಕಿತ್ಸೆ ನಿರಾಕರಿಸಿದರೆ ನಿರ್ದಾಕ್ಷಿಣ್ಯ ಕ್ರಮ

    ಮಂಗಳೂರು: ಖಾಸಗಿ ಆಸ್ಪತ್ರೆಗೆ ಬರುವ ಕರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಸ್ ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
    ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗೂ ವೆನ್ಲಾಕ್ ಆಸ್ಪತ್ರೆಗಳಿಗೆ ಸಂಸದ ನಳಿನ್‌ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಯೊಂದಿಗೆ ಭೇಟಿ ನೀಡಿದ ಅವರು, ಸೋಂಕಿತರು ಅಥವಾ ಇತರ ಯಾವುದೇ ರೋಗಿಗಳು ಚಿಕಿತ್ಸೆಗಾಗಿ ಅಲೆದಾಡುವುದನ್ನು ಸಹಿಸಲಾಗದು. ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲೇಬೇಕು ಎಂದರು.
    ಶೇ.50ರಷ್ಟು ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿಡಲು ಆದೇಶಿಸಲಾಗಿದೆ. ಬಿಪಿಎಲ್ ಅಥವಾ ಎಪಿಎಲ್ ಸೇರಿದಂತೆ ಚಿಕಿತ್ಸೆಗೆ ಬರುವ ಜನಸಾಮಾನ್ಯರಿಗೆ ಆಯುಷ್ಮಾನ್ ಯೋಜನೆ ಜತೆ ಸಂಯೋಜಿಸಿ ಸರ್ಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.
    ಗರ್ಭಿಣಿಯರಿಗೂ ಚಿಕಿತ್ಸೆ: ಗರ್ಭಿಣಿಯರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಸಕಾಲಕ್ಕೆ ಮಹಿಳೆಗೆ ಚಿಕಿತ್ಸೆ ನೀಡದವರನ್ನು ಸೇವೆಯಿಂದ ಅಮಾನತು ಮಾಡಲೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

    ಹೊಂದಾಣಿಕೆಯಿಂದ ಕರ್ತವ್ಯ: ಲೇಡಿಗೋಷನ್ ಆಸ್ಪತ್ರೆಯಲ್ಲಿ ಕೋವಿಡ್ ಶಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ನಿರ್ಮಾಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು. ವೆನ್ಲಾಕ್‌ನಲ್ಲಿ ವೈದ್ಯರು ಪರಸ್ಪರ ಹೊಂದಾಣಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಉಪಹಾರದಲ್ಲಿ ದಿನನಿತ್ಯ ಬದಲಾವಣೆ ತಂದು, ಅಗತ್ಯ ಇರುವವರಿಗೆ ಹೆಚ್ಚುವರಿ ಉಪಹಾರ ಒದಗಿಸಬೇಕು. ವೆನ್ಲಾಕ್ ಆಸ್ಪತ್ರೆಗೆ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ನೇಮಿಸಬೇಕು ಎಂದು ಸಚಿವರು ಸೂಚಿಸಿದರು.
    ವೆನ್ಲಾಕ್‌ನಲ್ಲಿ ಶಾಸಕ ಡಿ.ವೇದವ್ಯಾಸ ಕಾಮತ್, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ, ಲೇಡಿಗೋಷನ್ ಅಧೀಕ್ಷಕಿ ಡಾ.ಸವಿತಾ ಉಪಸ್ಥಿತರಿದ್ದರು.

    ದ.ಕ.ಕ್ಕೆ 50 ವೆಂಟಿಲೇಟರ್: ದ.ಕ ಜಿಲ್ಲೆಗೆ 25,000 ರ‌್ಯಾಪಿಡ್ ಆಂಟಿಜನ್ ಟೆಸ್ಟ್ ಕಿಟ್ ಹಾಗೂ 50 ವೆಂಟಿಲೇಟರ್‌ಗಳ ಪೂರೈಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರ ಪೂರೈಕೆಯಾಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಕೊರತೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು, ಕಡಿಮೆ ವೆಚ್ಚದ ವೆಂಟಿಲೇಟರ್‌ಗಳನ್ನು ಪೂರೈಸುವ ಬಗ್ಗೆ ಪರಿಶೀಲನೆ ನಡೆಸಲು ಸಚಿವರು ಆರೋಗ್ಯ ಇಲಾಖೆಗೆ ಸೂಚಿಸಿದರು. ವೆನ್ಲಾಕ್‌ನಲ್ಲಿ ಐಸಿಯು ಕೊಠಡಿಗಳ ವಿಸ್ತರಣೆ ಹಾಗೂ ಹೆಚ್ಚುವರಿ ವೆಂಟಿಲೇಟರ್‌ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ ಸಚಿವರು, ಹೆಚ್ಚುವರಿ ಪಿಪಿಇ ಕಿಟ್, ಎನ್95 ಮಾಸ್ಕ್ ಒದಗಿಸಲಾಗುವುದು. ಹೆಚ್ಚುವರಿ ವೈದ್ಯರು, ಪ್ರಯೋಗಶಾಲಾ ತಂತ್ರಜ್ಞರು, ಡಿ ಗ್ರೂಪ್ ಸಿಬ್ಬಂದಿ ನೇಮಕ, ಆಂಬುಲೆನ್ಸ್‌ಗಳ ಖರೀದಿ ಸೇರಿದಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಅನುಮೋದನೆ ನೀಡಲಿದೆ ಎಂದರು.

    ದ.ಕ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಕ್ರಮ ಕೈಗೊಳ್ಳಬೇಕು. ರೋಗಲಕ್ಷಣಗಳಿಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಇದರಿಂದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.
    – ನಳಿನ್‌ಕುಮಾರ್ ಕಟೀಲ್, ಸಂಸದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts