

ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಕ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ರಚನಾ ಬ್ಯಾನರ್ಜಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಸಿದ್ದು, ಸಂತ್ರಸ್ತೆಯ ಹೆಸರನ್ನು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಶ್ಚಿಮ ಬಂಗಾಳದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.
ಕೋಲ್ಕತ್ತಾ ಹೈಕೋರ್ಟ್ ವಕೀಲ ಶಯಾನ್ ಸಚಿನ್ ಬಸು ತೃಣಮೂಲ ಕಾಂಗ್ರೆಸ್ ಸಂಸದೆ ರಚನಾ ಬ್ಯಾನರ್ಜಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮೃತಳ ಹೆಸರನ್ನು ಹಲವು ಬಾರಿ ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತರ ಹೆಸರನ್ನು ಈ ರೀತಿ ಪುನರುಚ್ಚರಿಸುವುದು ಆಕೆಯ ಕುಟುಂಬದ ಸುರಕ್ಷತೆ ಮತ್ತು ಅವರ ಘನತೆಗೆ ಹೆಚ್ಚು ಅಪಾಯವನ್ನುಂಟುಮಾಡುತ್ತದೆ ಎಂದು ವಕೀಲರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇದಾದ ಬಳಿಕ ಸಂಸದೆ ಕ್ಷಮೆಯಾಚಿಸಿದ್ದು, ಸಾಮಾಜಿಕ ಜಾಲತಾಣಗಳಿಂದ ವಿಡಿಯೋ ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದಾರೆ.
ಮತ್ತೊಂದೆಡೆ, ಮೃತಳ ಮರಣೋತ್ತರ ಪರೀಕ್ಷೆಯ ವರದಿಗೆ ಪ್ರತಿಕ್ರಿಯಿಸಿದ ಖ್ಯಾತ ವೈದ್ಯರಾದ ಸುಬರ್ನೋ ಗೋಸ್ವಾಮಿ ಮತ್ತು ಕುನಾಲ್ ಶಂಕರ್ ಅವರು ಭಾನುವಾರ ಕೋಲ್ಕತ್ತಾ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅಲ್ಲದೆ, ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿಗೆ ಪೊಲೀಸರು ಈಗಾಗಲೇ ಸಮನ್ಸ್ ಜಾರಿ ಮಾಡಿದ್ದಾರೆ.