2019ರ ದಿಗ್ವಿಜಯಕ್ಕೆ ಮತ್ತೊಮ್ಮೆ ಮೋದಿ ಹವಾ

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಲು ಬಿಜೆಪಿ ಸಂಕಲ್ಪ ತೊಟ್ಟಿದ್ದು, ಪ್ರಧಾನಿ ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಬಿಜೆಪಿ ಯುವ ಮೋರ್ಚಾ ‘ವಿಜಯ ಲಕ್ಷೃ-2019’ ಕಾರ್ಯಕ್ರಮ ಆರಂಭಿಸಿದೆ ಎಂದು ಬಿಜೆಪಿಯ ಯುವ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ ಗೌಡ ತಿಳಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಕರ್ನಾಟಕದ ಬಿಜೆಪಿ ಯುವ ಮೋರ್ಚಾದಿಂದ ವಿಜಯ ಲಕ್ಷೃ ಕಾರ್ಯಕ್ರಮಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಯುವ ಮತದಾರರನ್ನು ಬಿಜೆಪಿಯತ್ತ ಸೆಳೆಯಲು, ಸಂಘಟನೆ ಒಳಗೊಂಡು 14 ವಿವಿಧ ಯೋಜನೆಗಳ ಕಾರ್ಯಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಶಾಸಕ ಅನಿಲ್ ಬೆನಕೆ, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಬಿಜೆಪಿ ವಕ್ತಾರ ಎಂ.ಬಿ.ಝಿರಲಿ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಮೇಶ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಸ್ವಪಕ್ಷದಲ್ಲೇ ಸಿದ್ದರಾಮಯ್ಯ ಅಭದ್ರ

ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರ ವಿಶ್ವಾಸ ಕಳೆದುಕೊಂಡಿರುವ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅಭದ್ರತೆ ಕಾಡುತ್ತಿದೆ, ಅವರ ಮಾತುಗಳಲ್ಲಿ ಮನಸ್ಸಿನ ಸ್ಥಿತಿ ಪ್ರಕಟವಾಗುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಟೀಕಿಸಿದರು.

ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಅವರ ಮಾತುಗಳು ಬದಲಾಗುತ್ತಿವೆ. ಅವರು ಶಾಸಕರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ದಕ್ಷಿಣ ಕರ್ನಾಟಕ ಭಾಗದ 3 ಜಿಲ್ಲೆಗಳಿಗೆ ಮಾತ್ರ ಮೈತ್ರಿ ಸರ್ಕಾರದ ಅನುದಾನ ಬಳಕೆ ಆಗುತ್ತಿದೆ. ರಾಜ್ಯದಲ್ಲಿ 150 ತಾಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಿದ್ದರೂ ಸಚಿವರು, ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ಕೊಟ್ಟು ಜನರ ಸಮಸ್ಯೆ ಆಲಿಸಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈಗಾಗಲೇ ಕೇಂದ್ರ ಸರ್ಕಾರ ಬೆಳಗಾವಿ ನಗರದ ರಿಂಗ್ ರೋಡ್ ಒಳಗೊಂಡು ರಾಜ್ಯದ ವಿವಿಧ ಭಾಗಗಳಲ್ಲಿ ರಸ್ತೆ ನಿರ್ಮಾಣಕ್ಕಾಗಿ ನೂರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರ ಅನುದಾನ ಸದ್ಬಳಕೆ ಮಾಡಿಕೊಂಡಿಲ್ಲ. ಬದಲಾಗಿ ಅನುದಾನದ ಕೊರತೆ ನೆಪದಲ್ಲಿ ದಿನ ಕಳೆಯುತ್ತಿದೆ. ಪರಿಣಾಮ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಆಗದಿರುವ ಹಿನ್ನೆಲೆಯಲ್ಲಿ ಶಾಸಕರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.