More

    ಉಡುಪಿ ಜಿಲ್ಲೆಯಲ್ಲಿ 8,037 ಸಿಇಟಿ ವಿದ್ಯಾರ್ಥಿಗಳು

    ಉಡುಪಿ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಪರಿಣಾಮಕಾರಿ ರೀತಿಯಲ್ಲಿ ಹಾಗೂ ಯಾವುದೇ ರೀತಿಯ ಲೋಪ&ದೋಷ ಉಂಟಾಗದಂತೆ ಪಾರದರ್ಶಕವಾಗಿ ನಡೆಸಬೇಕು. ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಏ.18 ಮತ್ತು 19ರಂದು ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 8,037 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.

    ಉಡುಪಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 2024ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಉಡುಪಿಯಲ್ಲಿ 6, ಕಾರ್ಕಳ ಹಾಗೂ ಕುಂದಾಪುರದಲ್ಲಿ ತಲಾ 4, ಬ್ರಹ್ಮಾವರದಲ್ಲಿ 3 ಸೇರಿ ಒಟ್ಟು 17 ಪರೀಕ್ಷಾ ಕೇಂದ್ರ ತೆರೆಯಲಾಗುತ್ತಿದೆ. ವಿಜ್ಞಾನ ವಿದ್ಯಾರ್ಥಿಗಳಿಗೆ ಮುಂದಿನ ವಾರ ನಡೆಯಲಿರುವ ಸಿಇಟಿ ಪರೀಕ್ಷೆಗೆ ಕೊನೆಯ ಕ್ಷಣಗಳಲ್ಲಿರುವ ಗೊಂದಲ ನಿವಾರಣೆಗೆ ಗೈಡ್​ ಮಾಡಬೇಕು ಎಂದರು.

    ಭದ್ರತೆ ನೀಡಿ:
    ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್​ ಭದ್ರತೆಯಲ್ಲಿ ಇಡಬೇಕು. ಅಲ್ಲದೆ, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸಬೇಕು. ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಸೀಲ್ದಾರರು, ಬಿಇಒಗಳು ಮತ್ತು ಪ್ರಾಂಶುಪಾಲರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ಪೊಲೀಸ್​ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸಬೇಕು. ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶ ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್​ ಭದ್ರತೆ ನೀಡಬೇಕು ಎಂದರು.
    ಈ ಬಾರಿ ಜಿಲ್ಲೆಯಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಬಂದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ಜಿಲ್ಲೆಯ ಎಲ್ಲ ಶಿಕ್ಷಕರಿಗೂ, ಪ್ರಾಂಶುಪಾಲರಿಗೂ ಹಾಗೂ ಅಧಿಕಾರಿಗಳಿಗೂ ಡಿಸಿ ವಿದ್ಯಾಕುಮಾರಿ ಅಭಿನಂದನೆ ತಿಳಿಸಿದರು.

    ವ್ಯವಸ್ಥೆ ಕಲ್ಪಿಸಿ:
    ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಹಾಯಕರ ನೇಮಕ, ವಿದ್ಯುತ್​ ವ್ಯತ್ಯಯವಾಗದಂತೆ ಎಚ್ಚರಿಕೆ, ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಬಸ್​ಗಳ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಮರ್ಥವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದರು.
    ಜಿಪಂ ಸಿಇಒ ಪ್ರತಿಕ್​ ಬಾಯಲ್​, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್​., ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಎಸ್​.ಟಿ. ಸಿದ್ಧಲಿಂಗಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ವಿವಿಧ ಕಾಲೇಜು ಪ್ರಾಂಶುಪಾಲರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್​ಗಳು, ಮೊಬೈಲ್​, ಇಲೆಕ್ಟ್ರಾನಿಕ್ಸ್​ ಉಪಕರಣ ತರುವುದು ಹಾಗೂ ಆಭರಣ ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಕ್ಕೆ ಆಗಮಿಸಬೇಕು. ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಯಾವುದಾದರೂ ಇನ್ನೊಂದು ಗುರುತಿನ ಚೀಟಿ (ಕಾಲೇಜಿನ ಗುರುತಿನ ಚೀಟಿ, ಬಸ್​ ಪಾಸ್​, ಡೆವಿಂಗ್​ ಲೈಸೆನ್ಸ್​, ಪಾಸ್​ಪೋರ್ಟ್​, ಆಧಾರ್​ ಕಾರ್ಡ್​, ಪಾನ್​ ಕಾರ್ಡ್​) ತರಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರಾಗಬಾರದು ಅಥವಾ ಬೇರೆಯವನ್ನು ನಿಯೋಜಿಸಕೂಡದು ಎಂದು ಡಿಸಿ ವಿದ್ಯಾಕುಮಾರಿ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts