More

    ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ, ಸಚಿವ ಸಂಪುಟ ಅನುಮೋದನೆ

    ಉಡುಪಿ: ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ 115 ಕೋಟಿ ರೂ. ವೆಚ್ಚದ ಯೋಜನೆಗೆ ಗುರುವಾರ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

    ಹಳೆಯ ಕಟ್ಟಡದಲ್ಲಿ ಜೋರು ಮಳೆಗೆ ಛಾವಣಿ ಸೋರುವುದರಿಂದ 3 ಅಥವಾ 4 ಮಹಡಿಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ 6 ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಸುಸಜ್ಜಿತ ಜಿಲ್ಲಾಸ್ಪತ್ರೆ ಬೇಕು ಎಂಬ ಕೂಗು ಬಲವಾಗಿದ್ದು, ಜನಪ್ರತಿನಿಧಿಗಳ ಹಾಗೂ ಜನರ ಒತ್ತಾಯದ ಮೇರೆಗೆ ಮುಖ್ಯಮಂತ್ರಿ ವಿಶೇಷ ಅನುದಾನ ಕಲ್ಪಿಸಿದ್ದಾರೆ. ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 115 ಕೋಟಿ ರೂ. ಹಾಗೂ ಸಿಬ್ಬಂದಿ ನೇಮಕಕ್ಕೆ 6.10 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

    ಪ್ರಸ್ತುತ ಇರುವ ಜಿಲ್ಲಾಸ್ಪತ್ರೆ ಕಟ್ಟಡದ ಹಿಂಭಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದ್ದು, ಕಾಮಗಾರಿ ಮುಂದುವರಿದಂತೆ ಹಳೇ ಕಟ್ಟಡವನ್ನು ಕೆಡವಲಾಗುತ್ತದೆ. 100 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿ, 15 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ತಿಳಿಸಿದ್ದಾರೆ.

    50 ವರ್ಷ ಹಳೇ ಕಟ್ಟಡ: 1967ರಲ್ಲಿ ನಿರ್ಮಾಣಗೊಂಡಿದ್ದ ಜಿಲ್ಲಾಸ್ಪತ್ರೆಯ ಹೆಂಚಿನ ಛಾವಣಿ ಕಟ್ಟಡವನ್ನು ಅಂದಿನ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಉದ್ಘಾಟಿಸಿದ್ದರು. 53 ವರ್ಷಗಳಷ್ಟು ಹಳೆಯದಾದ ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. 2001ರಿಂದ ಆಸ್ಪತ್ರೆಯನ್ನು ಹಂತ ಹಂತವಾಗಿ ವಿಸ್ತರಿಸಲಾಗಿದೆ. ಸುಮಾರು 10 ಎಕರೆ ಜಾಗವನ್ನು ಆಸ್ಪತ್ರೆಗೆ ಮೀಸಲಿಡಲಾಗಿದೆ. ನಿತ್ಯ 500ಕ್ಕೂ ಅಧಿಕ ಹೊರರೋಗಿಗಳು ತಪಾಸಣೆಗಾಗಿ ಬರುತ್ತಿದ್ದು, 100ಕ್ಕೂ ಅಧಿಕ ಮಂದಿ ಒಳರೋಗಿಗಳಾಗಿ ದಾಖಲಾಗುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts