More

    ಏ.೧ರಿಂದ ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆ: ಲಿಂಗರಾಜು ದೊಡ್ಡಮನಿ

    ಮಡಿಕೇರಿ: ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೫ನೇ ಸುತ್ತಿನಲ್ಲಿ ಏ೧ ರಿಂದ ೩೦ ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ತಿಳಿಸಿದರು.


    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಲಸಿಕಾ ಕಾರ್ಯಕ್ರಮದ ಬಿತ್ತಿಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು.


    ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಮಾಹಿತಿ ನೀಡಿದರು.


    ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ ಎಂದು ಲಿಂಗರಾಜ ದೊಡ್ಡಮನಿ ತಿಳಿಸಿದರು.


    ಕೊಡಗು ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ೭೦ ಲಸಿಕಾ ದಾರರನ್ನು ಒಳಗೊಂಡ ಒಟ್ಟು ೧೧ ತಂಡಗಳನ್ನು ರಚಿಸಲಾಗಿದೆ. ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ವಿವರಿಸಿದರು.


    ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ ೪ ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು. ಹೆಚ್ಚಿನ ಮಾಹಿತಿಗೆ ಮಡಿಕೇರಿ-೯೪೪೮೬೪೭೨೭೬, ಸೋಮವಾರಪೇಟೆ ದೂ.ಸಂ.೯೪೪೮೫೯೭೪೯೬, ವಿರಾಜಪೇಟೆ ದೂ.ಸಂ. ೯೧೪೧೦೯೩೯೯೬, ಕುಶಾಲನಗರ ೯೪೪೮೪೨೨೨೬೯ ಹಾಗೂ ಪೊನ್ನಂಪೇಟೆ ದೂ.ಸಂ.೯೪೪೯೦೮೧೩೪೩ ನ್ನು ಸಂಪರ್ಕಿಸಬಹುದು ಎಂದು ಪಶುಪಾಲನೆ ಇಲಾಖೆಯ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿರವರು ತಿಳಿಸಿದರು.


    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts