More

    ವಚನಕಾರರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಕರೆ

    ಚಿಕ್ಕಬಳ್ಳಾಪುರ: ಪ್ರತಿಯೊಬ್ಬರು ವಚನಕಾರರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಕರೆ ನೀಡಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪಶ್ಯತೆ, ಮೂಢನಂಬಿಕೆ, ಶೋಷಣೆ ಹೊಗಲಾಡಿಸಲು ಶ್ರಮಿಸಿದ ವಚನಕಾರರಲ್ಲಿ ಅಂಬಿಗರ ಚೌಡಯ್ಯ ಒಬ್ಬರು. ಯಾರಿಗೂ ಹೆದರದೆ, ಅಳುಕದೇ ಸಮಾಜದ ಅಂಕುಡೊಂಕುಗಳನ್ನು ತಿದ್ದಿದರು. ಕಾಯಕ ನಿಷ್ಠೆ, ಹಸಿದವರಿಗೆ ಅನ್ನ ನೀಡುವಿಕೆ, ದುಃಖದಲ್ಲಿದ್ದವರಿಗೆ ಸಾಂತ್ವನ, ಕಷ್ಟದಲ್ಲಿದ್ದವರಿಗೆ ನೆರವು ಸೇರಿ ಹಲವು ವಿಚಾರಗಳನ್ನು ವಚನದ ಮೂಲಕ ಜಗತ್ತಿಗೆ ಸಾರಿದರು. ಮನುಕುಲಕ್ಕೆ ಮಾದರಿಯಾಗಿರುವ ಅಂಬಿಗರ ಚೌಡಯ್ಯನವರು ಕೇವಲ ಗಂಗಾಮತ ಸಮಾಜಕ್ಕೆ ಸೀಮಿತರಲ್ಲ. ಅವರು ಸಮಾಜದ ಆಸ್ತಿ ಎಂದು ತಿಳಿಸಿದರು.

    ಶಿಡ್ಲಘಟ್ಟ ಅಕ್ಷರ ಕಾಲೇಜು ಪ್ರಾಂಶುಪಾಲ ಪ್ರಕಾಶ್ ಮಾತನಾಡಿ, ಸಮಾಜದ ಏಳಿಗೆಗೆ ಶಿಕ್ಷಣ ಅಗತ್ಯ. ಪಾಲಕರು ಮಕ್ಕಳನ್ನು ಚೆನ್ನಾಗಿ ಓದಿಸಿ, ಉಜ್ವಲ ಭವಿಷ್ಯ ರೂಪಿಸಬೇಕು. ಯುವ ಜನತೆ ದುಶ್ಚಟಗಳಿಂದ ದೂರ ಉಳಿದು ಒಳ್ಳೆಯ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

    ಕೆ.ವಿ.ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಜಿ.ನರಸಿಂಹಯ್ಯ ಮಾತನಾಡಿ, ವಚನಕಾರರು ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ಸಾರಿರುವುದರ ಜತೆಗೆ ಮಾದರಿ ಜೀವನ ನಡೆಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಕೆ.ನರಸಿಂಹಮೂರ್ತಿ, ನಿವೃತ್ತ ಪ್ರಾಂಶುಪಾಲ ಬಿ.ವಿ ಕೃಷ್ಣಪ್ಪ, ಬೆಸ್ತರ ಸಂಘದ ಜಿಲ್ಲಾಧ್ಯಕ್ಷ ಜಯರಾಮ್ ಮತ್ತಿತರರು ಇದ್ದರು.

    ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ: ಅಂಬಿಗರ ಚೌಡಯ್ಯ ಭಾವಚಿತ್ರವನ್ನು ಮುತ್ತಿನ ಪಲ್ಲಕ್ಕಿಯಲ್ಲಿಟ್ಟು ನಗರದ ಪ್ರಮುಖ ರಸ್ತೆಗಳಲ್ಲಿ ಡೊಳ್ಳು ಕುಣಿತ ಸೇರಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಬೆಸ್ತರ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಮುಖಂಡರು ವಾಪಸಂದ್ರದಿಂದ ಬಿ.ಬಿ.ರಸ್ತೆ, ಬಜಾರ್ ರಸ್ತೆ, ಗಂಗಮ್ಮನಗುಡಿ ರಸ್ತೆಯ ಮೂಲಕ ಅಂಬೇಡ್ಕರ್ ಭವನಕ್ಕೆ ಆಗಮಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts