

ಬೈಂದೂರು: ಬೈಂದೂರು ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ಭೇಟಿ ನೀಡಿದರು. ಸೋಮೇಶ್ವರ ಅಭಿವೃದ್ಧಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಹಾನಿ ವರದಿ ಪಡೆದು ಶೀಘ್ರ ಸರ್ಕಾರದಿಂದ ದೊರೆಯುವ ಪರಿಹಾರ ಒದಗಿಸಿಕೊಡಲಾಗುತ್ತದೆ. ಸೋಮೇಶ್ವರ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಪಡೆಯುತ್ತೇನೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದರು. ಬಳಿಕ ವತ್ತಿನೆಣೆಯಲ್ಲಿ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿದರು.
ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ತಹಸೀಲ್ದಾರ್ ಪ್ರದೀಪ್ ಆರ್., ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.