ಮ್ಯಾನ್‌ಹೋಲ್ ಸ್ವಚ್ಛತೆಗೆ ಯಂತ್ರ ಬಳಕೆ ಕಡ್ಡಾಯ

ವಿಜಯಪುರ : ಮಲಹೋರುವ ಪದ್ಧತಿ ನಿರ್ಮೂಲನೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಇನ್ನೂ ಸಂಪೂರ್ಣ ನಿಷೇಧವಾಗಿಲ್ಲ. ಅದರ ನಿರ್ಮೂಲನೆಗೆ ಮ್ಯಾನ್‌ಹೋಲ್ ಸ್ವಚ್ಛತೆಗೆ ಯಂತ್ರಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ರಾಷ್ಟ್ರೀಯ ಸಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ ಹಿರೇಮನಿ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಶೌಚ ಸ್ವಚ್ಛತೆಗೆ ಯಂತ್ರಗಳನ್ನು ಬಳಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಎಲ್ಲ ಸಾಯಿ ಕರ್ಮಚಾರಿಗಳ ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ದೊರಕಿಸಲು ಸಹಾಯವಾಗಲಿದೆ. ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಮಲಹೊರುವ ಪದ್ಧತಿ ನಿರ್ಮೂಲನೆಗೆ ಸಾಯಿ ಕರ್ಮಚಾರಿಗಳ ಅಧಿಕೃತ ದತ್ತಾಂಶ ಕಲೆ ಹಾಕಬೇಕಿದೆ. ಜುಲೈ ಅಂತ್ಯದೊಳಗೆ ಸಮೀಕ್ಷೆ ಕಾರ್ಯಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸಾಯಿ ಕರ್ಮಚಾರಿಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸುವ ಜತೆಗೆ ಸಮಾಜದ ಮುಖ್ಯವಾಹಿನಿಗೆ ತರುವ ಅವಶ್ಯಕತೆ ಇದೆ. ಸಾಯಿ ಕರ್ಮಚಾರಿಗಳ ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸಲು ಅನುಕೂಲವಾಗುವಂತೆ ಅವರಿಗೆ ಉದ್ಯೋಗವಕಾಶ, ಪುನರ್ವಸತಿ, ಆರೋಗ್ಯ ವ್ಯವಸ್ಥೆ ಹಾಗೂ ಕುಟುಂಬದ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ತಲುಪಿಸುವ ಅಗತ್ಯವಿದೆ. ಆ ದಿಸೆಯಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿ ಅವರ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಮಲಹೊರುವ ಪದ್ಧತಿ ನಿರ್ಮೂಲನೆಗೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು. ಆ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ವಿವಿಧ ಯಂತ್ರಗಳ ಮೂಲಕ ಸ್ವಚ್ಛತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು. ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *