More

    ಶಿಕ್ಷಕರು ದೇಶದ ಭದ್ರ ಬುನಾದಿ ಇದ್ದಂತೆ

    ವಿಜಯಪುರ: ಶಿಕ್ಷಕರು ದೇಶದ ಭದ್ರ ಬುನಾದಿ ಇದ್ದಂತೆ. ತಂದೆ, ತಾಯಿ ನಂತರ ಮಕ್ಕಳ ಜೀವನ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಹೇಳಿದರು.

    ನಗರದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಡಾ.ಎಸ್.ರಾಧಾಕೃಷ್ಣನ್ ಜನ್ಮದಿನೋತ್ಸವ ಅಂಗವಾಗಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಮನಸ್ಸಿಟ್ಟು ಪಾಠ ಮಾಡುವ ಶಿಕ್ಷಕರು ವಿದ್ಯಾರ್ಥಿಯ ಮನಸ್ಸಿನಲ್ಲಿ ಸದಾ ಇರುತ್ತಾರೆ. ವಿದ್ಯಾರ್ಥಿಯು ಎಂತಹ ಉನ್ನತ ಸ್ಥಾನವನ್ನು ಅಲಂಕರಿಸಿದರೂ ಆ ಶಿಕ್ಷಕರನ್ನು ಮರೆಯುವುದಿಲ್ಲ. ನಾನೂ ಶಿಕ್ಷಕನಾಗಿದ್ದೆ. ಎಂಟು ವರ್ಷ ಪದವಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿದ್ದೇನೆ. ಮುಂದೆ ಕೆಎಎಸ್ ಪರೀಕ್ಷೆ ಬರೆದು ಈ ಹುದ್ದೆ ಅಲಂಕರಿಸಲು ಶಿಕ್ಷಕರು ಪ್ರಮುಖ ಕಾರಣರಾಗಿದ್ದಾರೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

    ಶಿಕ್ಷಕರು ಮಕ್ಕಳಿಗೆ ಅಂಕ ಗಳಿಸುವುದನ್ನು ಮಾತ್ರ ಬೋಧಿಸದೆ ಜೀವನ ಪಾಠ ಹೇಳಿಕೊಡುವ,ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡಬೇಕು. ಮಕ್ಕಳ ಪ್ರತಿಭೆ, ಆಸಕ್ತಿ ಗುರುತಿಸಿ ಪ್ರೋತ್ಸಾಹಿಸಬೇಕು. ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

    ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೋಳಸಂಗಿ ಮಾತನಾಡಿ, ದೇಶದ ಭವಿಷ್ಯ ನಿರ್ಮಿಸುವವರು ಶಿಕ್ಷಕರು. ಗುರುಗಳನ್ನು ತ್ರಿಮೂರ್ತಿಗಳಿಗೆ ಹೋಲಿಸಲಾಗಿದೆ. ಅಂತೆಯೇ ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಸುಧಾರಿಸುವ ಕಾರ್ಯವಾಗಬೇಕಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತರೆ ಒಳ್ಳೆಯ ಭವಿಷ್ಯ ಇದೆ ಎಂಬ ಭಾವನೆಯನ್ನು ಎಲ್ಲರಲ್ಲೂ ಮೂಡಿಸುವಂತಾಗಬೇಕು ಎಂದರು.

    ಡಿಡಿಪಿಐ ಎನ್.ವಿ.ಹೊಸೂರ ಮಾತನಾಡಿ, ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಆ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಕೋವಿಡ್ ಕಾಲದಲ್ಲಿ ಕಾರ್ಯ ನಿರ್ವಹಿಸಿ ಶಿಕ್ಷಕರು ಪ್ರಾಮಾಣಿಕ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

    ಗಣ್ಯರು ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆ ಅಧ್ಯಕ್ಷ ಸುರೇಶ ದೇಸಾಯಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ, ಶಿವಾನಂದ ಗುಡ್ಡೋಡಗಿ, ಎಸ್.ಎಸ್ ಪಡಶೆಟ್ಟಿ, ರಾಜಶೇಖರ ಉಮರಾಣಿ, ಸಯ್ಯದ್ ಜುಬೇರ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts