More

    ಗ್ರಾಮ ಮಟ್ಟದಲ್ಲಿ ಕರೊನಾ ನಿಯಂತ್ರಿಸಿ

    ವಿಜಯಪುರ: ಗ್ರಾಮೀಣ ಮಟ್ಟದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಹಸೀಲ್ದಾರಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

    ಮಂಗಳವಾರ ಜಿಲ್ಲಾಡಳಿತ ಕಚೇರಿಯಲ್ಲಿ ಎಲ್ಲ ತಹಸೀಲ್ದಾರಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಕರೊನಾ ಎರಡನೇ ಅಲೆ ಹರಡದಂತೆ ಸರಪಳಿಯನ್ನು ತುಂಡರಿಸಲು ಈಗಾಗಲೇ ಸರ್ಕಾರದಿಂದ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರೊನಾ ನಿಯಂತ್ರಣ ಕುರಿತು ಗ್ರಾಮ, ನಗರ ಮಟ್ಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದೆ. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಅಂಥವರನ್ನು ಕರೊನಾ ಕಾಳಜಿ ಕೇಂದ್ರಕ್ಕೆ ರವಾನಿಸಲಾಗುತ್ತಿದೆ ಎಂದರು.

    ಗ್ರಾಮೀಣ ಪ್ರದೇಶದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದರಿಂದ ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದರು.

    ಸರ್ಕಾರದ ಮಾರ್ಗಸೂಚಿಯಲ್ಲಿ ಮದುವೆ ಸಮಾರಂಭಗಳಿಗೆ ಗರಿಷ್ಠ 40 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮಾರ್ಗಸೂಚಿ ಪಾಲನೆ ಬಗ್ಗೆ ತಹಸೀಲ್ದಾರರು ಮದುವೆ ಸಮಾರಂಭ ಜರುಗುವ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬೇಕು ಎಂದರು.

    ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಕರೊನಾ ಪ್ರಕರಣಗಳು ಇರುವ 5 ಗ್ರಾಮಗಳಿಗೆ ತಹಸೀಲ್ದಾರರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವೇನು ಎಂಬುದರ ಬಗ್ಗೆ ಪತ್ತೆ ಹಚ್ಚಬೇಕು ಎಂದರು.

    ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡು ಬಂದ ಗ್ರಾಮಗಳಲ್ಲಿ ತಹಸೀಲ್ದಾರರು ಮತ್ತು ತಾಪಂ ಇಒ ತೆಗೆದುಕೊಂಡ ಕ್ರಮದ ಬಗ್ಗೆ ಪ್ರತಿದಿನ ಪರಿಶೀಲನೆ ಮಾಡಬೇಕು ಹಾಗೂ ಕರೊನಾ ನಿಯಂತ್ರಣ ಕುರಿತು ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕೆಂದರು.

    ತಹಸೀಲ್ದಾರ್ ಮತ್ತು ತಾಪಂ ಇಒ ಪ್ರತಿದಿನ 10 ಗ್ರಾಮಗಳಿಗೆ ಭೇಟಿ ನೀಡಬೇಕು. ಕರೊನಾ ಮುನ್ನೆಚ್ಚರಿಕೆ ಕುರಿತು ಜನರಿಗೆ ಸೂಕ್ತ ತಿಳಿವಳಿಕೆ ನೀಡಬೇಕು. ಆಯಾ ಗ್ರಾಮಗಳಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕೆಂದು ತಿಳಿಸಿದರು. ಜಿಪಂ ಸಿಇಒ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts