More

    ಕರೊನಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸಿ

    ವಿಜಯಪುರ: ಕರೊನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಸೂಕ್ತ ಅರಿವು ಮೂಡಿಸುವುದರ ಜತೆಗೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೊನಾ ವೈರಸ್ ಕುರಿತು ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.
    ಕರೊನಾ ವೈರಸ್ ಬಗ್ಗೆ ಸದ್ಯಕ್ಕೆ ಆತಂಕವಿಲ್ಲದಿದ್ದರೂ, ಸಾರ್ವಜನಿಕರಲ್ಲಿ ಸೂಕ್ತ ಎಚ್ಚರಿಕೆ, ಸ್ವಚ್ಛತೆ ಕುರಿತು ಅರಿವು ಮೂಡಿಸಬೇಕು. ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾನಂಥ ರೋಗಗಳು ಕಂಡು ಬಂದ ತಕ್ಷಣ ಭಯಪಡುವ ಅಗತ್ಯವಿಲ್ಲ. ಚಿಕಿತ್ಸೆಗಾಗಿ ಸಮೀಪದ ಸಾರ್ವಜನಿಕ, ಜಿಲ್ಲಾ ಆಸ್ಪತ್ರೆಗಳಿಗೆ ಸಂಪರ್ಕಿಸಿ ಚಿಕಿತ್ಸೆ ಪಡೆಯುವ ಮೂಲಕ ಖಾತ್ರಿ ಪಡಿಸಿಕೊಳ್ಳಬಹುದೆಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ಹಾಗೂ ಆಯಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 5 ಬೆಡ್, ಜಿಲ್ಲೆಯ ಮತ್ತು ನಗರದ ಪ್ರತಿಷ್ಠಿತ 16 ಖಾಸಗಿ ಆಸ್ಪತ್ರೆಗಳಲ್ಲಿ 146 ಬೆಡ್‌ಗಳ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಕುರಿತು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಂಶಯಾಸ್ಪದ ಪ್ರಕರಣಗಳ ಬಗ್ಗೆ ನಿಗಾ ಇಡಬೇಕು. ಸಂಶಯಾಸ್ಪದ ಪ್ರವಾಸಿಗರು ಮತ್ತು ರೋಗಿಗಳ ಬಗ್ಗೆ ನಿಗಾ ಇಡಬೇಕು. ಅವಶ್ಯಕ ಔಷಧ, ವೈದ್ಯರು ಮತ್ತು ಸಿಬ್ಬಂದಿಗಳ ನಿಯೋಜನೆ ಮಾಡಿಕೊಳ್ಳಬೇಕು ಎಂದರು.
    ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ. ಬಿರಾದಾರ ಮಾತನಾಡಿ, ಕರೊನಾ ವೈರಸ್ ಕುರಿತು ಮುನ್ನೆಚ್ಚರಿಕೆಯಾಗಿ ಜಿಲ್ಲಾ ಮಟ್ಟದಲ್ಲಿ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ಸಮಿಕ್ಷೆ ಮತ್ತು ಸಂಪರ್ಕ ತಂಡ, ಮಾನವ ಸಂಪನ್ಮೂಲ ನಿರ್ವಹಣಾ ತಂಡ, ತರಬೇತಿ ಮತ್ತು ಜಾಗೃತಿ ತಂಡ, ವಸ್ತು ನಿರ್ವಹಣಾ ತಂಡ, ಮೂಲಸೌಕರ್ಯ ನಿರ್ವಹಣಾ ತಂಡ, ಪ್ರಚಾರ ಮತ್ತು ಜಾಗೃತಿ ತಂಡಗಳನ್ನು ರಚಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
    ಕರೊನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿದ್ದು. ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜತೆಗೆ ನಿಕಟ ಸಂಪರ್ಕದಲ್ಲಿರುವಾಗ, ಸೋಂಕಿತ ವ್ಯಕ್ತಿಯ ಹಸ್ತಲಾಘನ ಮಾಡುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ ಸೋಂಕು ಹರಡುವ ಸಾಧ್ಯತೆಗಳಿವೆ ಎಂದು ಹೇಳಿದರು.
    ಹೆಚ್ಚಿನ ಮಾಹಿತಿಗಾಗಿ 24*7 ಉಚಿತ ಆರೋಗ್ಯ ಸಹಾಯವಾಣಿ 104ಗೆ ಕರೆ ಮಾಡಬಹುದು. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕರೊನಾ ವೈರಸ್ ರೋಗಿಗಳ ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದರು.
    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ , ಡಿಡಿಪಿಐ ಸಿ. ಪ್ರಸನ್ನಕುಮಾರ, ಡಾ. ಸಂಪತ್‌ಕುಮಾರ ಗುಣಾರೆ, ಆರೋಗ್ಯ ಇಲಾಖೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts