More

    ಸೋಂಕಿತ ರೋಗಿಗಳ ಮೇಲೆ ನಿಗಾವಹಿಸಿ

    ವಿಜಯಪುರ: ಕರೊನಾ ವೈರಸ್ (ಕೋವಿಡ್-19) ವಿಶ್ವದ್ಯಾಂತ ಹರಡುತ್ತಿದ್ದು, ಜಿಲ್ಲೆಯಲ್ಲಿ ಸಂಶಯಾಸ್ಪದ ಸೋಂಕಿತ ರೋಗಿಗಳ ಬಗ್ಗೆ ನಿಗಾ ಇಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೊನಾ ವೈರಸ್ ಹರಡುವಿಕೆ ಮತ್ತು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
    ಕರೊನಾ ವೈರಸ್ ಕುರಿತಂತೆ ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಅರಿವು ಮೂಡಿಸಬೇಕು. 500 ಬಸ್‌ಗಳಿಗೆ ಸ್ಟೀಕರ್ ಅಂಟಿಸಬೇಕು. ಕರಪತ್ರ ಹಂಚಬೇಕು, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಜಾಗೃತಿ ಮೂಡಿಸಬೇಕಿದೆ ಎಂದರು.
    ನೆಗಡಿ, ಕೆಮ್ಮು ಹಾಗೂ ಜ್ವರ ಬಂದ ತಕ್ಷಣ ಕರೊನಾ ವೈರಸ್ ತಗುಲಿದೆ ಎಂದು ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರರು. ಆಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಒಳಪಡುವ ಮೂಲಕ ತಮ್ಮ ಸಮಸ್ಯೆಯನ್ನು ನಿವಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಜಿಪಂ ಸಿಇಒ ಗೋವಿಂದ ರೆಡ್ಡಿ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಖುದ್ದಾಗಿ ಮುತುವರ್ಜಿ ವಹಿಸಿ ಆಯಾ ಶಾಲೆಗಳಲ್ಲಿ ಮಕ್ಕಳಿಗೆ ಪ್ರಾರ್ಥನೆ ಸಂದರ್ಭದಲ್ಲಿ ಕರೊನಾ ವೈರಸ್ ಕುರಿತು ಜಾಗೃತಿ ಮೂಡಿಸಬೇಕು. ಅಂಗನವಾಡಿಗಳಲ್ಲಿ ಬಿಸಿಯೂಟ ಮಾಡುವ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ ಮಾತನಾಡಿ, ಜ್ವರ, ತಲೆ ನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ, ಬೇಧಿಯಂತಹ ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಕರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ಚೀನಾದ ಆರೋಗ್ಯಾಧಿಕಾರಿಗಳು ಖಚಿತ ಪಡಿಸಿದ್ದಾರೆ. ಹಾಗಾಗಿ ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜತೆಗೆ ನಿಕಟ ಸಂಪರ್ಕದಲ್ಲಿರುವಾಗ, ಸೋಂಕಿತ ವ್ಯಕ್ತಿಯ ಹಸ್ತಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ ರೋಗ ಹರಡುತ್ತದೆ. ಆದ್ದರಿಂದ ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ , ಕೈವಸ ಉಪಯೋಗಿಸಬೇಕು. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸೋಂಕಿತ ರೋಗಿಗಳ ಮೇಲೆ ನಿಗಾವಹಿಸಿ
    ಸೋಂಕಿತ ರೋಗಿಗಳ ಮೇಲೆ ನಿಗಾವಹಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts