More

    ಬೇಸಿಗೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಿ

    ವಿಜಯಪುರ: ಜಿಲ್ಲಾದ್ಯಂತ ಮುಂಬರುವ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಕ್ರಿಯಾ ಯೋಜನೆ ರೂಪಿಸಲಾಗಿದೆ. ಅದರನ್ವಯ ವಿವಿಧ ಇಲಾಖೆಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಪ್ಪದೆ ಪಾಲಿಸಿ, ಬೇಸಿಗೆ ಕಾಲದ ಗರಿಷ್ಠ ಉಷ್ಣಾಂಶ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸೂಕ್ತ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸುವಂತೆ ತಿಳಿಸಿದರು.
    ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯ ಇಂಡಿ ಮತ್ತು ಚಡಚಣ ಭಾಗಗಳಲ್ಲಿ ಗರಿಷ್ಠ ಪ್ರಮಾಣದ ಉಷ್ಣಾಂಶದ ಮುನ್ಸೂಚನೆ ಲಭ್ಯವಾಗಿದ್ದು, ಗರಿಷ್ಠ ಉಷ್ಣಾಂಶ ಸಂದರ್ಭದಲ್ಲಿ ಮಧ್ಯಾಹ್ನ ಸಮಯದಲ್ಲಿ ಹಿರಿಯ ನಾಗರಿಕರು, ಚಿಕ್ಕ ಮಕ್ಕಳು ಹಾಗೂ ಮಹಿಳೆಯರು ಅವಶ್ಯಕ ಜಾಗೃತಿ ವಹಿಸಬೇಕು. ಅದಕ್ಕೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

    ಸಹಾಯವಾಣಿ ಆರಂಭ

    ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ವೃತ್ತಗಳಲ್ಲಿ ನೆರಳಿಗಾಗಿ ಸೂಕ್ತ ಮೇಲ್ಛಾವಣಿ ವ್ಯವಸ್ಥೆ ಮಾಡಬೇಕು. ಮಹಾನಗರ ಪಾಲಿಕೆಯಿಂದ ತುರ್ತು ಕಂಟ್ರೋಲ್ ರೂಂ ತೆರೆಯಬೇಕು. ಆರೋಗ್ಯ ಇಲಾಖೆ ಮೂಲಕ 108 ಆಂಬುಲೆನ್ಸ್, ತುರ್ತು ಚಿಕಿತ್ಸೆಗೆ ವಾರ್ಡ್‌ಗಳ ಸೌಲಭ್ಯ, ಅವಶ್ಯಕ ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಬಿಸಿಲಿನ ತಾಪಮಾನದಿಂದ ಸಾವು ನೋವು ಸಂಭವಿಸಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಾಯವಾಣಿ 1077ಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಪ್ರಕೃತಿ ವಿಕೋಪ ಪ್ರಾಧಿಕಾರ ರಚನೆ

    ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005 ರನ್ವಯ ಜಿಲ್ಲಾ ಪ್ರಕೃತಿ ವಿಕೋಪ ಪ್ರಾಧಿಕಾರಗಳನ್ನು ರಾಜ್ಯದ 22 ಜಿಲ್ಲೆಗಳಲ್ಲಿ ಹೆಚ್ಚಿಸಲಾಗಿದ್ದು, ವಿಜಯಪುರ ಜಿಲ್ಲೆಯು ಒಳಗೊಂಡಿದೆ. ಜಿಲ್ಲಾಧಿಕಾರಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಹ ಅಧ್ಯಕ್ಷರಾಗಿರುತ್ತಾರೆ. ಜಿಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸದಸ್ಯರಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾಗಿರುತ್ತಾರೆ ಎಂದು ವಿವರಿಸಿದರು. ಜಿಪಂ ಸಿಇಒ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ವಿಪತ್ತು ನಿರ್ವಹಣಾಧಿಕಾರಿ ರಾಕೇಶ್ ಜೈನಾಪುರ ಸೇರಿದಂತೆ ಇತರರು ಸಭೆಯಲ್ಲಿದ್ದರು.

    ಬೇಸಿಗೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಿ
    ಬೇಸಿಗೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಿ
    ಬೇಸಿಗೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts