More

    ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿ

    ವಿಜಯಪುರ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್‌ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಶೀಘ್ರ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದ ಶಾಸಕರ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಶಶಿಕಲಾ ಜೊಲ್ಲೆ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರ ಜತೆಗೆ ಬ್ಲ್ಯಾಕ್ ಫಂಗಸ್ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಅದರ ಚಿಕಿತ್ಸೆಗೆ ಸೂಕ್ತವಾದ ತಜ್ಞ ವೈದ್ಯರ ಅವಶ್ಯಕತೆ ಇದ್ದು, ಕೂಡಲೇ ತಜ್ಞ ವೈದ್ಯರನ್ನು ನೇಮಕ ಮಾಡಬೇಕೆಂದು ಮನವಿ ಸಲ್ಲಿಸಿದರು.

    ಜಿಲ್ಲೆಯ 13 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಿ ಮಾತ್ರ ತಾಲೂಕು ಆಸ್ಪತ್ರೆ ಇದ್ದು, ಉಳಿದ 9 ತಾಲೂಕಿನಲ್ಲಿ ತಾಲೂಕು ಆಸ್ಪತ್ರೆ ಮಂಜೂರು ಮಾಡುವುದು ಹಾಗೂ ಶೀಘ್ರ ಕಾಮಗಾರಿ ಪ್ರಾರಂಭಿಸಬೇಕು. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೆಂಟಿಲೇಟರ್ ಬೆಡ್, ಆಕ್ಸಿಜನ್ ಬೆಡ್ ಹಾಗೂ ಸೂಕ್ತ ತಜ್ಞ ವೈದ್ಯರು ಹಾಗೂ ತಂತ್ರಜ್ಞರ ನೇಮಕ ಹಾಗೂ ಅವರಿಗೆ ಸೂಕ್ತ ತರಬೇತಿ ನೀಡುವುದು. ಎನ್‌ಟಿಪಿಸಿ ಘಟಕದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒಳಗೊಂಡ 100 ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಎನ್‌ಟಿಪಿಸಿ ಮುಖ್ಯಸ್ಥರಿಗೆ ಸೂಚನೆ ನೀಡುವುದು. ಜಿಲ್ಲೆಯಲ್ಲಿ 81 ವಿವಿಧ ವೃಂದದ ತಜ್ಞ ವೈದ್ಯರ ಅವಶ್ಯಕತೆ ಇದ್ದು, ಕೂಡಲೇ ವೈದ್ಯರನ್ನು ನೇಮಕ ಮಾಡಿಕೊಳ್ಳುವುದು. ಸಿಂದಗಿ ಹಾಗೂ ತಾಳಿಕೋಟೆ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ನಿರ್ಮಿಸುವುದು. ರೆಮ್‌ಡೆಸಿವಿರ್ ಲಸಿಕೆಗೆ ಹೆಚ್ಚಿನ ಬೇಡಿಕೆಯಿದ್ದು, ಬೇಡಿಕೆ ನೀಗಿಸಲು ಅಗತ್ಯ ಲಸಿಕೆಗಳನ್ನು ಸರಬರಾಜು ಮಾಡುವುದರ ಕುರಿತು ಮನವಿ ಸಲ್ಲಿಸಲಾಯಿತು.

    ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

    ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕರೊನಾ ವಾರಿಯರ್ಸ್‌ಗಳೆಂದು ಭಾವಿಸಿ ಅವರಿಗೂ ಲಸಿಕೆ ನೀಡಬೇಕು. ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಮನವಿ ಮಾಡಿದರು.

    ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎಂಎಲ್‌ಸಿ ಅರುಣ ಶಹಾಪುರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts