More

    ಮುನ್ನೆಚ್ಚರಿಕೆ-ಪಾರದರ್ಶಕತೆಯಿಂದ ಪರೀಕ್ಷೆ ನಡೆಸಿ

    ವಿಜಯಪುರ: ಜು. 30 ರಿಂದ ಆ. 1ರವರೆಗೆ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ಕರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯೊಂದಿಗೆ ನಡೆಸಲು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.
    ನಗರದ ಬಾಲಕಿಯರ ಸರ್ಕಾರಿ ಪಪೂ ಕಾಲೇಜ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಕರೊನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ಕ್ರಮ ಕೈಗೊಂಡು ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅವಶ್ಯಕ ಥರ್ಮಲ್ ಸ್ಕಾೃನರ್, ಸ್ಯಾನಿಟೈಜರ್ ಇಟ್ಟುಕೊಳ್ಳುವುದರ ಜೊತೆಗೆ ಸಾಮಾಜಿಕ ಅಂತರದೊಂದಿಗೆ ನೂಕುನುಗ್ಗಲು ಆಗದಂತೆ ಎಚ್ಚರಿಕೆ ವಹಿಸಿ ಪರೀಕ್ಷೆ ನಡೆಸುವಂತೆ ಸೂಚಿಸಿದರು.
    ಪರೀಕ್ಷೆ ಆರಂಭವಾಗುವ ಮುಂಚಿತವಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳುವುದರ ಜತೆಗೆ ಔಷಧ ಸಿಂಪರಣೆ, ಸ್ವಚ್ಛತೆ ಇನ್ನಿತರ ಕ್ರಮಗಳನ್ನು ಶಿಸ್ತುಬದ್ಧವಾಗಿ ಮತ್ತು ಯೋಜನಾ ಬದ್ಧವಾಗಿ ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳು ಆತಂಕಪಡದಂತೆ ಮುನ್ನೆಚ್ಚರಿಕೆ ವಹಿಸಿ ತಮ್ಮ ಮಗುವೆಂದು ಭಾವಿಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಕಾಳಜಿಯೊಂದಿಗೆ ಪರೀಕ್ಷೆ ಹಮ್ಮಿಕೊಳ್ಳಬೇಕು. ಯಾವುದೇ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮತ್ತು ಇತರೆ ಸಮಸ್ಯೆಗಳನ್ನು ಅಪರ ಜಿಲ್ಲಾಧಿಕಾರಿಗಳಿಗೆ ಸಂಪರ್ಕ ಸಾಧಿಸಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದರು.

    ಒಟ್ಟು 17 ಪರೀಕ್ಷಾ ಕೇಂದ್ರಗಳು

    ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 7992 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಆರಂಭಕ್ಕೂ ಮುನ್ನ ಎರಡ್ಮೂರು ಗಂಟೆ ಮುಂಚಿತವಾಗಿ ಸಂಬಂಧಪಟ್ಟ ಸಿಬ್ಬಂದಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದು, ಸೂಕ್ತ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೆ, ಅಪಕೀರ್ತಿಗೆ ಕಾರಣವಾಗದೆ ಮಾದರಿಯಾಗಿ ಪರೀಕ್ಷೆ ಹಮ್ಮಿಕೊಳ್ಳಬೇಕು. ವಿವೇಕ ಮತ್ತು ವಿವೇಚನೆ, ಜಾಣತನ, ಚಾಕಚಕ್ಯತೆಯಿಂದ ಕೆಲಸ ಮತ್ತು ಸಣ್ಣಪುಟ್ಟ ಸಮಸ್ಯೆಗಳನ್ನು ನಿರ್ವಹಿಸುವಂತೆ ಸೂಚಿಸಿರುವ ಅವರು, ಶಿಕ್ಷಣ, ಆರೋಗ್ಯ, ಕಂದಾಯ, ಪೊಲೀಸ್ ಮತ್ತು ಅವಶ್ಯಕ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

    ನಿಷೇಧಾಜ್ಞೆ ಜಾರಿ

    ಪರೀಕ್ಷೆಗೆ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಕೂಡಲು ಮತ್ತು ಒಂದು ವಿದ್ಯಾರ್ಥಿಗೆ ಒಂದು ಬೆಂಚ್ ವ್ಯವಸ್ಥೆಯಾಗಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೆಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪಾಗಿ ಕೂಡುವುದಾಗಲಿ ಅಥವಾ ಪರೀಕ್ಷೆ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಝರಾಕ್ಸ್ ಮತ್ತು ಸೈಬರ್ ಕೆೆಗಳು ಬಂದ್ ಮಾಡಬೇಕು. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಹಾಜರಾಗಬೇಕು. ಥರ್ಮಲ್ ಸ್ಕಾೃನರ್ ಮತ್ತು ಸ್ಯಾನಿಟೈಸರ್‌ಗಾಗಿ ತಲಾ ಇಬ್ಬರು ಸಿಬ್ಬಂದಿಯನ್ನು ನೇಮಿಸಲಾಗುತ್ತಿದ್ದು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದ ಶಿಕ್ಷಕರನ್ನು ನಿಯೋಜಿಸಬಾರದು. ಅದರಂತೆ ನಿಯೋಜಿಸಿದ ಶಿಕ್ಷಕರ ಮಕ್ಕಳು ಅದೇ ಕೇಂದ್ರದಲ್ಲಿ ಬರದಂತೆ ಮತ್ತು ಕರೊನಾ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆ ಸುಲಲಿತವಾಗಿ ನಡೆಯುವಂತೆ ನೋಡಿಕೊಳ್ಳಲು ತಿಳಿಸಿದರು.
    ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ ದಡ್ಡಿ ಮಾತನಾಡಿ, ವಿಜಯಪುರ ನಗರದಲ್ಲಿ 14, ಇಂಡಿ-1, ಸಿಂದಗಿ-1, ಮುದ್ದೇಬಿಹಾಳ-1 ಸೇರಿದಂತೆ 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಮಾರ್ಗಾಧಿಕಾರಿಗಳು, ಅಧಿಕ್ಷಕರು, ಮೇಲ್ವಿಚಾರಕರು, ಉಪಾಧೀಕ್ಷಕರು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳನ್ನು ಮೂರು ದಿನಗಳ ಮೊದಲು ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು ಎಂದರು.
    ತಹಸೀಲ್ದಾರ್ ಮೋಹನ್‌ಕುಮಾರಿ ಮತ್ತಿತರರಿದ್ದರು.

    ಮುನ್ನೆಚ್ಚರಿಕೆ-ಪಾರದರ್ಶಕತೆಯಿಂದ ಪರೀಕ್ಷೆ ನಡೆಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts