More

    ಪತ್ರಕರ್ತರ ಸೇವೆ ಶ್ಲಾಘನೀಯ

    ವಿಜಯಪುರ: ಕೋವಿಡ್-19 ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಅನನ್ಯ ಮತ್ತು ಪ್ರಶಂಸಾರ್ಹವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಒಂದೂವರೆ ವರ್ಷಗಳಿಂದ ಕೋವಿಡ್-19 ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಸರ್ಕಾರದ ಜತೆಗೆ ಕೈಜೋಡಿಸಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದು ಅದಕ್ಕಾಗಿ ಸರ್ಕಾರ ಮಾಧ್ಯಮ ಪ್ರತಿನಿಧಿಗಳಿಗೆ ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಿದ್ದು, ಕೋವಿಡ್ ಲಸಿಕೆಯನ್ನು ಪ್ರತ್ಯೇಕವಾಗಿ ವಿಶೇಷ ರೀತಿಯಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಲಸಿಕೆಯಿಂದ ಅಡ್ಡಪರಿಣಾಮ ಆಗುತ್ತದೆ ಎಂಬ ಭಯ ಸಾರ್ವಜನಿಕರಲ್ಲಿದ್ದು, ಆ ಭಯ ಹೋಗಲಾಡಿಸಲು ಮತ್ತು ಲಸಿಕೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂಬುವುದನ್ನು ತಿಳಿಹೇಳುವ ದಿಸೆಯಲ್ಲಿ ಹಾಗೂ ಲಸಿಕೆ ಪಡೆಯಲು ಪ್ರೇರಣೆಗಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕಾ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಈ ದೇಶದ ಒಗ್ಗಟ್ಟು ಮತ್ತು ಒಳ್ಳೆಯ ಸಮಾಜಕ್ಕೆ ಆಧಾರಸ್ತಂಭವಾಗಿದ್ದು, ಅದರಂತೆ ಪತ್ರಿಕಾರಂಗವೂ ಗುರುತರ ಜವಾಬ್ದಾರಿ ಹೊಂದಿದೆ. ಪ್ರತಿ ಮನೆ ಮನೆಗೆ ಒಳ್ಳೆಯ ಸಂದೇಶ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಆದ್ದರಿಂದ ಕೋವಿಡ್ ಲಸಿಕೆ ಅತ್ಯವಶ್ಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಪ್ರಥಮ ದರ್ಜೆ ಸಹಾಯಕಿ ಚಂದ್ರಕಲಾ ಅವರು ಕರೊನಾದಿಂದ ಮೃತಪಟ್ಟ ಹಿನ್ನೆಲೆ ಎರಡು ನಿಮಿಷ ಮೌನ ಆಚರಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು.

    45ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳು ಪ್ರಥಮ ಹಂತದ ಲಸಿಕೆ ಪಡೆದುಕೊಂಡರು.

    ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಪಂ ಸಿಇಒ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ಜಿಲ್ಲಾ ಆರ್‌ಸಿಎಚ್ ಡಾ. ಮಹೇಶ ನಾಗರಬೆಟ್ಟ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಬಿ. ಬಿರಾದಾರ, ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಸಚಿಂದ್ರ ಲಂಬು, ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ್ ನದಾಫ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts