More

    3.11 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

    ವಿಜಯಪುರ : ಜಿಲ್ಲೆಯಲ್ಲಿ 3.11 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.

    ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಕ್ಯಾಬ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಜಿಲ್ಲೆಯ ವಿವಿಧೆಡೆ 1,253 ಪೋಲಿಯೋ ಲಸಿಕಾ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ನಿಗದಿತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲಾದ್ಯಂತ ರಾಷ್ಟ್ರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಬೂತ್‌ಮಟ್ಟದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಆರೋಗ್ಯ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು.

    ಈ ಬಾರಿ 5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಇದೇ ವೇಳೆ ಮಕ್ಕಳ ಪಾಲಕರಲ್ಲಿ ಮನವಿ ಮಾಡಿದರು. ವಿಜಯಪುರದ ನವಬಾಗ, ಸಿಕ್ಯಾಬ್, ಲುಕ್ಮಾನ್ ಯುನಾನಿ ಕಾಲೇಜಿನಲ್ಲಿ ಪೋಲಿಯೋ ಅಭಿಯಾನ ಕಾರ್ಯಕ್ರಮ ನಡೆಯಿತು. ಜಿಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ , ಜಿಲ್ಲಾ ನೋಡಲ್ ಅಧಿಕಾರಿ ಡಾ. ಜಯರಾಮ, ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಡಾ. ಮಹೇಶ ನಾಗರಬೆಟ್ಟ, ಎನ್.ಆರ್. ಬಾಗವಾನ, ಸಿಕ್ಯಾಬ್ ಸಂಸ್ಥೆ ನಿರ್ದೇಶಕ ಸಲಾವುದ್ದಿನ್ ಪುಣೇಕರ, ಸಿಕ್ಯಾಬ್ ಸಂಸ್ಥೆಯ ಕಾರ್ಯದರ್ಶಿ ಎ.ಎಸ್.ಪಾಟೀಲ, ಮುಖಂಡರಾದ ಸಜ್ಜಾದ್ ಮುಶ್ರೀಫ್, ಪೀಟರ್ ಅಲೆಕ್ಸಾಂಡರ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts