ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ

ವಿಜಯಪುರ : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಕರು, ಪಾಲಕರಿಂದಾಗಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದ ಶ್ರೀ ಸಿದ್ಧೇಶ್ವರ ಕಲಾ ಭವನದಲ್ಲಿ ಬಾಲ ವಿಕಾಸ ಅಕಾಡೆಮಿ, ಶ್ರೀ ವೀರಭದ್ರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಾಂಸ್ಕೃತಿಕ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯದಿಂದಲೇ ಮಕ್ಕಳಲ್ಲಿ ಅನೇಕ ಪ್ರತಿಭೆಗಳಿರುತ್ತವೆ. ಆದರೆ ಅವುಗಳು ಬೆಳಕಿಗೆ ಬರುವುದಿಲ್ಲ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಿಸಿದ್ದೇ ಆದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ನಾಗಠಾಣ ಶಾಸಕ ದೇವಾನಂದ ಚವಾಣ್ ಮಾತನಾಡಿ, ಮಕ್ಕಳು ದೇವರ ಸಮಾನ. ಅವರು ದೇಶದ ಶಕ್ತಿ. ಅವರಿಗೆ ಪೂರ್ತಿದಾಯಕರಾಗಿ ಎಲ್ಲರೂ ಕೆಲಸ ಮಾಡಬೇಕು. ಸಮಾಜಮುಖಿ ಕಾರ್ಯಗಳಲ್ಲಿ ಮಕ್ಕಳನ್ನು ತೊಡಗಿಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಉತ್ತಮ ಪ್ರಜೆಗಳಾಗಿ ಸೇವೆ ಮಾಡಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೆಂಬಾವಿ ಮಠದ ಶ್ರೀ ಚನ್ನಬಸವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಪಾಲಿಕೆ ಸದಸ್ಯರಾದ ಉಮೇಶ ವಂದಾಲ, ರಾಹುಲ ಜಾಧವ, ಶ್ರೀ ವೀರಭದ್ರ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಈರಪ್ಪ, ಬಿ.ಎನ್.ಜಕ್ಕರ, ಪರಮೇಶ ಕುಲಕರ್ಣಿ, ರಾಜು ಖಂಡಸಾರಿ ಇತರರು ಉಪಸ್ಥಿತರಿದ್ದರು. ಇದೇ ವೇಳೆ ಜಾನಪದ ನೃತ್ಯ, ಭಾಷಣ ಸ್ಪರ್ಧೆ, ಭರತ ನಾಟ್ಯ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Leave a Reply

Your email address will not be published. Required fields are marked *