

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಸಾಹಸಸಿಂಹ ಎಂದೇ ಹೆಸರಾಗಿದ್ದ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷಾಚರಣೆ ಅಂಗವಾಗಿ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.27ರಂದು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಂಗಳೂರಿನ ನಂದಿ ಲಿಂಕ್ ಮೈದಾನದಲ್ಲಿ ಸಂಜೆ 6ರಿಂದ ರಾತ್ರಿ 11ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಚಿತ್ರರಂಗ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.
ಡಾ. ವಿಷ್ಣುವರ್ಧನ್ ಅವರ ಕಲಾ ಬದುಕು, ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಅವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಹೆಜ್ಜೆ ಗುರುತುಗಳನ್ನು ಸ್ಮರಿಸುವ ಉದ್ದೇಶದಿಂದ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸುಮಾರು ನಾಲ್ಕು ದಶಕಗಳ ಕಲಾ ಪಯಣದಲ್ಲಿ 220ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ವಿಷ್ಣುವರ್ಧನ್, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು. 1972ರಲ್ಲಿ ವಂಶವೃಕ್ಷ ಚಿತ್ರದ ಮೂಲಕ ಆರಂಭವಾದ ಅವರ ಚಿತ್ರಪಯಣ ಆಪ್ತಮಿತ್ರದವರೆಗೆ ಮುಂದುವರಿದಿತ್ತು.
ಕರ್ನಾಟಕ ಸರ್ಕಾರ ಡಾ. ವಿಷ್ಣುವರ್ಧನ್ ಹೆಸರಿನಲ್ಲಿ ಪ್ರಶಸ್ತಿ, ರಸ್ತೆಯೊಂದಕ್ಕೆ ಅವರ ಹೆಸರು ಹಾಗೂ 2025ರಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ವಿವಿಧ ಕ್ಷೇತ್ರದ ಗಣ್ಯರ ಆಗಮನ
ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಚಿತ್ರರಂಗದ ಹಿರಿಯ ಹಾಗೂ ಯುವ ಕಲಾವಿದರು, ತಂತ್ರಜ್ಞರು ಮತ್ತು ಚಿತ್ರರಂಗದ ಗಣ್ಯರ ಸಮಾಗಮ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ. ಕಾರ್ಯಕ್ರಮದಲ್ಲಿ ಸಂಗೀತ, ನೃತ್ಯ ಮತ್ತಿತರ ಕಲಾ ಪ್ರದರ್ಶನಗಳು ನಡೆಯಲಿವೆ.
ವಿಷ್ಣು ಸೇನಾ ಸಮಿತಿಯ ಸೇವಾ ಚಟುವಟಿಕೆ
ಡಾ. ವಿಷ್ಣು ಸೇನಾ ಸಮಿತಿ, ವಿಷ್ಣುವರ್ಧನ್ ಹಲವು ವರ್ಷಗಳಿಂದ ವಿವಿಧ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಂದ ಜನರ ಗಮನ ಸೆಳೆದಿದೆ. ವಿಶೇಷವಾಗಿ ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಕಲಾ ಸಾಧನೆ ಮತ್ತು ಕನ್ನಡ ನಾಡು-ನುಡಿಗೆ ಅವರ ಕೊಡುಗೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಇದೀಗ ಅವರ ಜನ್ಮ ಅಮೃತ ಮಹೋತ್ಸವವನ್ನು ಆಯೋಜಿಸಿದೆ.