More

    ಗ್ರಾಮ ಸ್ವರಾಜ್ಯ ಸಮಾವೇಶ ನಾಳೆ

    ಹಾವೇರಿ: ಮುಂಬರುವ ಗ್ರಾಪಂ ಚುನಾವಣೆಗೆ ಪಕ್ಷ ಸಂಘಟನೆಗಾಗಿ ನ. 30ರಂದು ಜಿಲ್ಲೆಯ ಹಿರೇಕೆರೂರು ಹಾಗೂ ಹಾವೇರಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 30ರಂದು ಬೆಳಗ್ಗೆ 10.30ಕ್ಕೆ ಹಿರೇಕೆರೂರಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಬ್ಯಾಡಗಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾವೇರಿ ಶಿವಬಸವೇಶ್ವರ ಕಲ್ಯಾಣಮಂಟಪದಲ್ಲಿ ನಡೆಯುವ ಸಮಾವೇಶದಲ್ಲಿ ಹಾವೇರಿ, ಶಿಗ್ಗಾಂವಿ-ಸವಣೂರು ಹಾಗೂ ಹಾನಗಲ್ಲ ವಿಧಾನಸಭಾ ಕ್ಷೇತ್ರಗಳ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

    ಈ ಸಮಾವೇಶದ ಮೂಲಕ ಕಾರ್ಯಕರ್ತರನ್ನು ಸಂಘಟಿಸಿ ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನೇಕ ಯೋಜನೆಗಳ ಕುರಿತು ಜನರಿಗೆ ಕಾರ್ಯಕರ್ತರು ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.

    ರಾಜ್ಯಾದ್ಯಂತ ಪ್ರವಾಸ ಮಾಡಿ ಗ್ರಾಮಸ್ವರಾಜ್ಯ ಸಮಾವೇಶ ನಡೆಸುವ ಹಿನ್ನೆಲೆಯಲ್ಲಿ ಪಕ್ಷದಿಂದ ರಾಜ್ಯಮಟ್ಟದಲ್ಲಿ 6 ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ ನಾಲ್ಕನೇ ತಂಡ ಜಿಲ್ಲೆಗೆ ಆಗಮಿಸಿ 2 ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ. ಈ ತಂಡದಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ ಜಾರಕಿಹೊಳಿ, ಬಿ.ಸಿ. ಪಾಟೀಲ, ಸಿ.ಸಿ. ಪಾಟೀಲ, ಶಶಿಕಲಾ ಜೊಲ್ಲೆ, ಸಂಸದರಾದ ಅನಂತಕುಮಾರ ಹೆಗಡೆ, ಶಿವಕುಮಾರ ಉದಾಸಿ ಸೇರಿ ಅನೇಕ ನಾಯಕರಿದ್ದಾರೆ ಎಂದರು.

    ಗ್ರಾಪಂ ಚುನಾವಣೆಗಾಗಿ ಈಗಾಗಲೇ ಗ್ರಾಮಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ವಾರ್​ರೂಂಗಳು, ಕಾಲ್​ಸೆಂಟರ್, ಪಂಚರತ್ನ ಸಮಿತಿಗಳು, ಪೇಜ್ ಪ್ರಮುಖ್​ರನ್ನು ನಿಯುಕ್ತಿಗೊಳಿಸಲಾಗಿದೆ. ಗ್ರಾಪಂಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ಗ್ರಾಮಸ್ವರಾಜ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ ಮಾತನಾಡಿ, ಗ್ರಾಪಂ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು, ಬಿಜೆಪಿ ಸಾಮಾನ್ಯ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ಜವಾಬ್ದಾರಿ ಪಕ್ಷದ ಮೇಲಿದೆ. ಪ್ರತಿಯೊಬ್ಬ ಕಾರ್ಯಕರ್ತರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಬೆನ್ನಿಗೆ ನಿಂತು ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದರು.

    ಸುದ್ದಿಗೋಷ್ಠಿಯಲ್ಲಿ ಶಾಸಕ ನೆಹರು ಓಲೇಕಾರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಪ್ರಭು ಹಿಟ್ನಳ್ಳಿ, ಗಿರೀಶ ತುಪ್ಪದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts