

Virat Kohli: ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಟ್ರೋಫಿ ಜಯಿಸಿದ್ದು ಗೊತ್ತೇ ಇದೆ. 18 ವರ್ಷದ ಬಳಿಕ ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ. ಇದರ ಸಂಭ್ರಮಾಚರಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಸಿದ್ಧತೆ ಸಹ ಮಾಡಿಕೊಳ್ಳಲಾಗಿತ್ತು. ಆದರೆ, ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಛಾಯೆ ಆವರಿಸಿತು. ಹೀಗಾಗಿ ಸಂಭ್ರಮಾಚರಣೆಯನ್ನು ರದ್ದು ಮಾಡಲಾಯಿತು. ಇದೀಗ ಈ ಘಟನೆಯ ಬಗ್ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೌನ ಮುರಿದಿದ್ದಾರೆ.
ಐಪಿಎಲ್ ಫ್ರಾಂಚೈಸಿಗಳಲ್ಲೇ ಆರ್‌ಸಿಬಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿದೆ. ಮಂಗಳವಾರ (ಜೂನ್ 03) ಅಹಮದಾಬಾದ್‌ನಲ್ಲಿ ಐಪಿಎಲ್ ಪ್ರಶಸ್ತಿ ಗೆದ್ದು, 18 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದ ಬಳಿಕ, ಬೆಂಗಳೂರಿನಲ್ಲಿ ದೊಡ್ಡ ಆಚರಣೆಯನ್ನು ಯೋಜಿಸಲಾಗಿತ್ತು. ಲಕ್ಷಾಂತರ ಜನರು ತಮ್ಮ ನೆಚ್ಚಿನ ಕ್ರಿಕೆಟ್ ತಾರೆಗಳನ್ನು ಸ್ವಾಗತಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೇರಿದ್ದರು. ಸುಮಾರು ಎರಡು ಲಕ್ಷ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಇದನ್ನು ನಿಯಂತ್ರಿಸಲು ಪೊಲೀಸರಿಂದ ಸಾಧ್ಯವಾಗಲಿಲ್ಲ. ಇದು ಸಂಪೂರ್ಣ ಅವ್ಯವಸ್ಥೆಗೆ ತಿರುಗಿತು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು, ಇದು 45 ಕ್ಕೂ ಹೆಚ್ಚು ಅಭಿಮಾನಿಗಳನ್ನು ಗಾಯಗೊಂಡಿದ್ದಾರೆ.
ಆರ್‌ಸಿಬಿ ತಂಡದ ಮಾಜಿ ನಾಯಕ ಹಾಗೂ ಪ್ರಶಸ್ತಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವಿರಾಟ್ ಕೊಹ್ಲಿ ಈಗ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಾತನಾಡಲು ಕಷ್ಟವಾಗುತ್ತಿದೆ. ಸಂಪೂರ್ಣವಾಗಿ ಹೃದಯ ವಿದ್ರಾವಕವಾಗಿದೆ ಎಂದು ಕೊಹ್ಲಿ ನಿನ್ನೆ (ಜೂನ್ 04) ರಾತ್ರಿ 10.45 ರ ಸುಮಾರಿಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿದ್ದ ಪೋಸ್ಟ್ ಅನ್ನೇ ಮತ್ತೆ ಹಂಚಿಕೊಂಡಿದ್ದಾರೆ.
ಇಂದು (ಜೂನ್ 04) ಮಧ್ಯಾಹ್ನ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕವಾಗಿ ಎಲ್ಲರು ಒಗ್ಗೂಡಿದ ಸಂದರ್ಭದಲ್ಲಿ ಸಂಭವಿಸಿದ ದುರಂತ ಘಟನೆಯ ಬಗ್ಗೆ ಮಾಧ್ಯಮ ವರದಿಗಳ ಮೂಲಕ ತಿಳಿದು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ಆರ್‌ಸಿಬಿಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ದುರಂತ ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ಕೂಡಲೇ ರದ್ದು ಮಾಡಿ ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ ಎಂದು ಆರ್‌ಸಿಬಿ ಹೇಳಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಕಾಲ್ತುಳಿತಕ್ಕೆ ಭಾರತದ ದಂತಕಥೆ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಕೂಡ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದದ್ದು ಅತ್ಯಂತ ದುರಂತ. ಬಾಧಿತ ಪ್ರತಿಯೊಂದು ಕುಟುಂಬಕ್ಕೂ ನನ್ನ ಹೃದಯ ಮಿಡಿಯುತ್ತದೆ. ಎಲ್ಲರಿಗೂ ಶಾಂತಿ ಮತ್ತು ಶಕ್ತಿಯನ್ನು ಹಾರೈಸುತ್ತೇನೆ ಎಂದು ಎಕ್ಸ್ನಲ್ಲಿ ಬರೆದಿದ್ದಾರೆ.
ಭಾರತದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ, ಕಾಲ್ತುಳಿತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇದು ಕ್ರಿಕೆಟ್‌ಗೆ ದುಃಖದ ದಿನ! ಇಂದು ಆರ್‌ಸಿಬಿ ವಿಜಯವನ್ನು ಆಚರಿಸುವಾಗ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃದಯ ಮಿಡಿಯುತ್ತದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಈ ಘಟನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆಂದು ದೃಢಪಡಿಸಿದರು. ಅಲ್ಲದೆ, ಗಾಯಾಳುಗಳಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಲಿದೆ ಎಂದರು. ವಿಜಯೋತ್ಸವದ ಸಂದರ್ಭದಲ್ಲಿ ದೊಡ್ಡ ದುರಂತ ಸಂಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅದು ಸಂಭವಿಸಿದೆ. ಮೃತರಿಗೆ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. (ಏಜೆನ್ಸೀಸ್)