

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ-20 ಸರಣಿ ಆಡುತ್ತಿದ್ದು, ಇದಾದ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಡಿಸೆಂಬರ್ 10ರಂದು ದಕ್ಷಿಣ ಆಫ್ರಿಕಾ ಪ್ರವಾಸ ಪ್ರಾರಂಭವಾಗಲಿದ್ದು, ಇದರಲ್ಲಿ ಭಾರತ ತಂಡವು 3 ಟಿ-20, 3 ಏಕದಿನ, 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿರುವ ಪ್ರಮುಖ ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವಾಪಸ್ ಆಗಲಿದ್ದು, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಏಕದಿನ ವಿಶ್ವಕಪ್ನಲ್ಲಿ ಟಾಪ್ ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದ ವಿರಾಟ್ ಕೊಹ್ಲಿ ಟಿ-20 ಹಾಗೂ ಏಕದಿನ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ ಎಂದು ಹೇಳಲಾಗಿದೆ.
ದಕ್ಷಿಣ ಅಫ್ರಿಕಾ ಪ್ರವಾಸದಲ್ಲಿ ಭಾರತ ಒಟ್ಟು 8 ಪಂದ್ಯಗಳನ್ನು ಆಡಲಿದ್ದು, ವಿರಾಟ್ ಕೊಹ್ಲಿ ಟಿ-20 ಹಾಗೂ ಏಕದಿನ ಪಂದ್ಯಗಳನ್ನು ಆಡುತ್ತಿಲ್ಲ ಎಂಬುದು ಸ್ಪಷ್ಟವಾಗಿದ್ದು, ಈ ಕಾರಣಕ್ಕಾಗಿಯೇ ವೈಟ್ಬಾಲ್ ಕ್ರಿಕೆಟ್ನಿಂದ ದೂರು ಉಳಿದಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಇನ್ನು ಆಯ್ಕೆ ಮಾಡಿಲ್ಲ. ಈಗಾಗಲೇ ವಿರಾಟ್ ಕೊಹ್ಲಿ ಟಿ-20 ಹಾಗೂ ಏಕದಿನ ಪಂದ್ಯಗಳನ್ನು ಆಡುತ್ತಿಲ್ಲ ಎಂಬುದಾಗಿ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ತಿಳಿಸಿರುವುದಾಗಿ ವರದಿಯಾಗಿದೆ. ಮೂಲಗಳ ಪ್ರಕಾರ, ಕೊಹ್ಲಿ ಟೆಸ್ಟ್ ಕ್ರಿಕೆಟ್ ಆಡುವುದಾಗಿ ಬಿಸಿಸಿಐಗೆ ತಿಳಿಸಿದ್ದು, ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯಲ್ಲಿ ಆಡಬಹುದು ಎಂಬುದು ಸ್ಪಷ್ಟವಾಗಿದೆ.